ಮಂಗಳೂರಿನ ಕೆಎಫ್‌ಸಿಗೆ ದಾಳಿ: ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ
Sunday, August 16, 2026
ಕಲುಷಿತ ಆಹಾರ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ನಲ್ಲಿರುವ ಕೆಎಫ್‌ಸಿ ಮಳಿಗೆಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದರು.
ಪರಿಶೀಲನೆ ವೇಳೆ ಮಳಿಗೆಯಲ್ಲಿ ಕೊಳೆತ ಕೋಳಿ ಮಾಂಸ ಹಾಗೂ ಅವಧಿ ಮೀರಿದ ಎಣ್ಣೆ ಪತ್ತೆಯಾಗಿದ್ದು, ಅಧಿಕಾರಿಗಳು ಮಾಂಸ ಮತ್ತು ಎಣ್ಣೆಯ ಮಾದರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಗ್ರಾಹಕರೊಬ್ಬರು ಆರ್ಡರ್ ಮಾಡಿದ ಚಿಕನ್‌ನಲ್ಲಿ ಕೆಟ್ಟ ವಾಸನೆ ಬಂದಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಮಳಿಗೆಯನ್ನು ಬಂದ್ ಮಾಡಿ, ಉತ್ಪನ್ನಗಳನ್ನು ತೆರವುಗೊಳಿಸಿ ಶುಚಿಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ತಿಳಿಸಿದ್ದಾರೆ.
