-->
 ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಿಟ್ಟೆ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಿಟ್ಟೆ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ


ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿದ ನಿಟ್ಟೆ ಕಾಲೇಜಿನ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್ ಅವರು ತಮ್ಮ ಸಹೋದರ ಪವನ್ ಕುಮಾ‌ರ್ ಹಾಗೂ ಸ್ನೇಹಿತ ಶ್ರೇಯಸ್‌ ಅವರೊಂದಿಗೆ ಈಶ್ವರನಗರದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಎರಡು ಕಾರುಗಳಲ್ಲಿ ಬಂದ ಆರೋಪಿತರು ಪವನ್ ಕುಮಾರ್‌ ಅವರನ್ನು ತಡೆದು ನಿಲ್ಲಿಸಿ ವಿನಾಕಾರಣ ಜಗಳ ಆರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಬಂಧಿತರು. ಇವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪವನ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಮಧ್ಯಪ್ರವೇಶಿಸಿದ ಯಶ್‌ರಾಜ್ ಹಾಗೂ ಶ್ರೇಯಸ್ ಅವರ ಮೇಲೆಯೂ ಹಲ್ಲೆ ನಡೆಸಿ, ಕಾಲಿನಿಂದ ತುಳಿದು, ಬಟ್ಟೆಗಳನ್ನು ಹರಿದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಮಣಿಪಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತನಿಖೆ ವೇಳೆ ಬಂಧಿತ ಆರೋಪಿಗಳೆಲ್ಲರೂ ನಿಟ್ಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಪ್ರಕರಣದ ಕುರಿತು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ಅವರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. 

Ads on article

Advertise in articles 1

advertising articles 2

Advertise under the article