ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಅಭಿಷೇಕ್ ಪೂಜಾರಿ ಮೃತ್ಯು
Friday, August 28, 2026
ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿದ್ದಾರೆ.
ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ತರಬೇತಿಯ ಸಂದರ್ಭದಲ್ಲಿ ವಿಮಾನ ಪತನಗೊಂಡ ಪರಿಣಾಮ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಅಭಿಷೇಕ್ ಪೂಜಾರಿ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ತಮ್ಮ ಕುಟುಂಬದೊಂದಿಗೆ ಆಗಾಗ್ಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಹಾಗೂ ಅಧಿಕೃತ ಪ್ರಕ್ರಿಯೆಗಳಿಗಾಗಿ ಕುಟುಂಬಸ್ಥರು ಕಾನ್ಪುರಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ಮಾಹಿತಿ ಲಭ್ಯವಾಗಿದೆ.
