ಮೂಡುಬಿದಿರೆ ಮಿಜಾರಿನಲ್ಲಿ ಅಡುಗೆ ಅನಿಲ ಸೋರಿಕೆ: ಮೂವರಿಗೆ ಗಾಯ
Tuesday, August 11, 2026
ಅಡುಗೆ ಅನಿಲದ ಸಿಲಿಂಡರ್‌ನಲ್ಲಿ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮೂಡುಬಿದಿರೆ ಸಮೀಪದ ಮಿಜಾರಿನಲ್ಲಿ ನಡೆದಿದೆ.
ಗಾಯಗೊಂಡವರನ್ನು ಆಳ್ವಾಸ್ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಸುಮಾರು 6.30ರ ವೇಳೆಗೆ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ನಲ್ಲಿ ಸೋರಿಕೆ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಅವರ ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್‌ಗೂ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.