ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ: ಆರೋಪಿ ಬಂಧನ
Friday, August 14, 2026
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಐಜಿಪಿ ಅವರ ಆದೇಶ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಐದು ಪ್ರಕರಣಗಳು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಇಕ್ಬಾಲ್ ಶೇಖ್‌ನನ್ನು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.