-->
 ಮೂಲ್ಕಿ: ಅಂತರ್ ಜಿಲ್ಲಾ ಕಳ್ಳರ ಬಂಧನ: 17.20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಾಹನಗಳ ಜಪ್ತಿ

ಮೂಲ್ಕಿ: ಅಂತರ್ ಜಿಲ್ಲಾ ಕಳ್ಳರ ಬಂಧನ: 17.20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಾಹನಗಳ ಜಪ್ತಿ


ಮೂಲ್ಕಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಭೇದಿಸಿರುವ ಮುಲ್ಕಿ ಪೊಲೀಸರು, ಕುಖ್ಯಾತ ಅಂತರ ಜಿಲ್ಲಾ ಕಳ್ಳರ ತಂಡದ ನಾಲ್ವರನ್ನು ಬಂಧಿಸಿದ್ದಾರೆ. 

ಬಂಧಿತರಿಂದ 17.20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೆ.1ರಂದು ಮಧ್ಯರಾತ್ರಿ ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಕೊರ್ದಬ್ಬು ದೈವದ ಬೆಲೆಬಾಳುವ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಿ ತನಿಖೆ ನಡೆಸಲಾಗಿತ್ತು. ಸೆ.6ರಂದು ಮುಲ್ಕಿ ಕಾರ್ನಾಡಿನಲ್ಲಿ ಹೆಜಮಾಡಿಯ ಜಾಹೀದ್ ಸಿನಾನ್ (36) ಹಾಗೂ ಕಾರ್ಕಳ ತಾಲೂಕಿನ ಯಾಸೀನ್ (36) ಅವರನ್ನು ಬಂಧಿಸಲಾಯಿತು. ಬಳಿಕ ಸೆ.7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ (26) ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದ್ದು, ಅವರಿಂದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನ ಸೇರಿದಂತೆ ಒಟ್ಟು 11.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ ಕಾರು ಸೇರಿದಂತೆ ಸುಮಾರು ₹6 ಲಕ್ಷ ಮೌಲ್ಯದ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ 17.20 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಂಧನದ ಬಳಿಕ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಗಳ ಬಗ್ಗೆಯೂ ಸುಳಿವು ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಮೊದಲ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್‌ಐ ರಾಘವೇಂದ್ರ ನಾಯಕ್ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article