-->
 ಸೆ. 18 ರಂದು ಸಿಎಂ ಡಿ.ಕೆ. ಶಿವಕುಮಾರ್ ಹೆಬ್ರಿ ಭೇಟಿ: ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಸೆ. 18 ರಂದು ಸಿಎಂ ಡಿ.ಕೆ. ಶಿವಕುಮಾರ್ ಹೆಬ್ರಿ ಭೇಟಿ: ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ


ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ. 18 ರಂದು ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಸಲಿರುವ ಸಭೆಯ ಕುರಿತು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.


ಮುಖ್ಯಮಂತ್ರಿಗಳು ಸೆ. 18 ರಂದು ಹೆಬ್ರಿಯ ಪದವಿ ಕಾಲೇಜಿನ ಆವರಣದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ ಅವರು, ಪೊಲೀಸ್ ಇಲಾಖೆಯವರು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ 35 ಗ್ರಾಮಗಳಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಜನಸಾಮಾನ್ಯರಿಂದ ಸ್ಪಷ್ಟ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಆಂಬುಲೆನ್ಸ್ ವ್ಯವಸ್ಥೆ ಒದಗಿಸಬೇಕು. ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಸನ್ನದ್ಧವಾಗಿರಬೇಕು. ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಕಸ್ತೂರಿ ರಂಗನ್ ವರದಿಯ ಅಧಿಸೂಚನೆಯಿಂದ ಸಮಸ್ಯೆ ಉಂಟಾಗಬಹುದಾದ ರೈತರು, ಬುಡಕಟ್ಟು ಜನಾಂಗದವರು, ಅರಣ್ಯವಾಸಿಗಳು ಸೇರಿದಂತೆ ಮತ್ತಿತರ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿಎಫ್‌ಒ ರುಥ್ರೇನ್ ಪಿ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article