2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ನ್ಯಾಯಾಲಯ ಸಮನ್ಸ್
Wednesday, September 30, 2026
2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಅಥಣಿ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 9ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.
ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅಥಣಿ ಪಟ್ಟಣದ ಲಕ್ಷ್ಮೀ ದೇವಸ್ಥಾನದ ಸಮೀಪ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲೇ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಈ ಕುರಿತು ರಾಜು ಜಮಖಂಡಿಕರ ಅವರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಲಕ್ಷ್ಮಣ ಸವದಿ ಅವರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ ಎಂಬ ಆರೋಪವನ್ನೂ ದೂರಿನಲ್ಲಿ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇದೀಗ ಅಥಣಿ ಜೆಎಂಎಫ್‌ಸಿ ನ್ಯಾಯಾಲಯವು ಲಕ್ಷ್ಮಣ ಸವದಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್ 9ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.