-->
 ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಿ: ಯಶ್‌ಪಾಲ್ ಸುವರ್ಣ

ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಿ: ಯಶ್‌ಪಾಲ್ ಸುವರ್ಣ


ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಬೇಡಿಕೆಗಳ ಕುರಿತು ಸೂಕ್ತ ನಿರ್ಣಯ ಕೈಗೊಂಡು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿ ಕರ್ನಾಟಕದ ಜನತೆಗೆ ಹೆಮ್ಮೆಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಬಹುದಿನಗಳ ಪ್ರಮುಖ ಬೇಡಿಕೆಯಾದ ಜಿಲ್ಲಾಸ್ಪತ್ರೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಲು ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು ಮಂಜೂರು ಮಾಡುವ ಕುರಿತು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು. ಶೀಘ್ರದಲ್ಲೇ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಲು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಕೃಷಿ ಪದವಿ ಕಾಲೇಜು, ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅಗತ್ಯ ಅನುದಾನ, ಮೀನುಗಾರಿಕೆಗೆ ಪ್ರೋತ್ಸಾಹ ಹಾಗೂ ಕರಾವಳಿಯ ವಿವಿಧೆಡೆ ಎದುರಾಗಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಶಾಲೆಗಳಿಗೆ ಹೆಚ್ಚಿನ ಅನುದಾನ, ಪ್ರಾಕೃತಿಕ ವಿಕೋಪ ಪರಿಹಾರ, ಬರ ಪರಿಹಾರ, ಪ್ರವಾಸೋದ್ಯಮ ಅಭಿವೃದ್ಧಿ, ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ವೈಯಕ್ತಿಕ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸೇವೆಗಳು ನಿಗದಿತ ಸಮಯದಲ್ಲಿ ದೊರೆಯುವಂತೆ ಖಾಲಿ ಇರುವ ಅಧಿಕಾರಿ ಹಾಗೂ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಸೌಲಭ್ಯ ಹೆಚ್ಚಿಸಬೇಕು. ವಿವಿಧ ನಿಗಮ-ಮಂಡಳಿಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಹಾಯೋಜನೆಯನ್ನು ಅಂತಿಮಗೊಳಿಸುವುದು ಹಾಗೂ ಶ್ರೀಕೃಷ್ಣ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ ಜಿಲ್ಲೆಯ ಜನತೆಯ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article