ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು
Tuesday, September 29, 2026
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಕಾರ್ಕಳದ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ.
ಮೃತರನ್ನು ಹಿರ್ಗಾನದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ ಹರ್ಷನ್ ಮುಳುಗಿದ್ದಾರೆ ಎನ್ನಲಾಗಿದೆ.
ವಾಹನ ಸಂಚಾರಕ್ಕೆ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ನಡೆದು ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದರು. ಠಾಣಾಧಿಕಾರಿ ಸಂಜೀವ ದೇವಾಡಿಗ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.