ಗಣೇಶೋತ್ಸವ ವೇಳೆ ಪರಿಸರ ಸಂರಕ್ಷಣೆ, ಸಾರ್ವಜನಿಕ ಹಿತ ಕಾಪಾಡಿ: ಡಾ. ಮಹೇಶ್ವರಿ ಸಿಂಗ್
ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಂದರ್ಬದಲ್ಲಿ ಗಣೇಶೋತ್ಸವ ಸಮಿತಿಗಳು ಪರಿಸರ ಸಂರಕ್ಷಣೆ ಜೊತೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ‘ಸನ್ಮತಿ’ ಮಾಸಿಕ ಸಂಚಿಕೆ ಬಿಡುಗಡೆ ಹಾಗೂ ‘ತಿಂಗಳ ಅಂಗಳ’ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಸಾಯನಿಕ ಬಣ್ಣಗಳನ್ನು ಬಳಸಿ ತಯಾರಿಸಿದ ಗಣಪತಿ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಚರಗಳಿಗೆ ಅಪಾಯ ಉಂಟಾಗುವುದರ ಜೊತೆಗೆ ಮಾನವನ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಬಹುದು. ಇಂತಹ ರಾಸಾಯನಿಕಗಳಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳಿಗೂ ಕಾರಣವಾಗುವ ಸಾಧ್ಯತೆಯಿದೆ. ಹಾಗಾಗಿ ಹೈಕೋರ್ಟ್ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ವಿಗ್ರಹಗಳ ತಯಾರಿ, ಮಾರಾಟ ಹಾಗೂ ವಿಸರ್ಜನೆಯನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಆವೆ ಮಣ್ಣಿನಿಂದ ಗಣಪತಿ ವಿಗ್ರಹ ತಯಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ವಿಸರ್ಜನೆಗೂ ಮುನ್ನ ವಿಗ್ರಹದಲ್ಲಿರುವ ಹೂವು ಹಾಗೂ ಅಲಂಕಾರ ಸಾಮಗ್ರಿಗಳನ್ನು ಪ್ರತ್ಯೇಕಿಸಬೇಕು ಎಂದರು.
ಹರಿಯುವ ನದಿ, ಹಳ್ಳ ಅಥವಾ ಇತರ ಜಲಮೂಲಗಳಲ್ಲಿ ವಿಗ್ರಹ ವಿಸರ್ಜಿಸುವ ಬದಲು ಬಕೆಟ್, ತೊಟ್ಟಿ ಅಥವಾ ಟ್ಯಾಂಕ್‌ಗಳಲ್ಲಿ ವಿಸರ್ಜಿಸುವುದು ಸೂಕ್ತ. ಕೆಲ ಸ್ಥಳೀಯ ಸಂಸ್ಥೆಗಳು ಮೊಬೈಲ್ ಟ್ಯಾಂಕ್ ವ್ಯವಸ್ಥೆಯನ್ನೂ ಮಾಡುತ್ತಿವೆ. ಅರಿಶಿನ, ಕಾಗದ, ಎಲೆ ಹಾಗೂ ವಿವಿಧ ಬಗೆಯ ಹಿಟ್ಟುಗಳಿಂದ ತಯಾರಿಸಿದ ವಿಗ್ರಹಗಳ ವಿಸರ್ಜನೆ ಪರಿಸರ ಸ್ನೇಹಿಯಾಗಿದೆ ಎಂದು ತಿಳಿಸಿದರು.
ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಏಕಬಳಕೆ ಪ್ಲಾಸ್ಟಿಕ್‌ನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದಲ್ಲಿ ವಸ್ತುಗಳನ್ನು ಜಪ್ತಿ ಮಾಡುವುದರ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಸೆನ್ ಅಪರಾಧ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ್ ದೊಡ್ಮನಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 409 ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಪರವಾನಗಿ ನೀಡಲಾಗಿದೆ. ಗಣೇಶೋತ್ಸವದ ಬಂದೋಬಸ್ತ್‌ಗಾಗಿ 163 ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟು 804 ಪೊಲೀಸರನ್ನು ಮೂರು ಉಪವಿಭಾಗಗಳಲ್ಲಿ ನಿಯೋಜಿಸಲಾಗಿದೆ ಎಂದರು.
ಗಣೇಶೋತ್ಸವದ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ಇಲ್ಲ. ಸೆ.14ರಿಂದ ಅ.14ರವರೆಗೆ ಗಣಪತಿ ವಿಗ್ರಹಗಳ ವಿಸರ್ಜನೆ ನಡೆಯಲಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾದಲ್ಲಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡುವಂತೆ ಅವರು ಮನವಿ ಮಾಡಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪ ಪರಿಸರ ಅಧಿಕಾರಿ ಡಾ. ಅಮೃತಾ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಯಶೋದಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.

.jpeg)