ಕೇರಳದಲ್ಲಿ ಭಾರಿ ಮಳೆ, ಭೂಕುಸಿತ: ಹಠಾತ್ ಪ್ರವಾಹಕ್ಕೆ ಐವರು ಬಲಿ; ಮುಂದುವರಿದ ರಕ್ಷಣಾ ಕಾರ್ಯ
ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹಲವೆಡೆ ಭೀಕರ ಭೂಕುಸಿತ ಹಾಗೂ ಹಠಾತ್ ಪ್ರವಾಹ ಸಂಭವಿಸಿದೆ. ದುರಂತಗಳಲ್ಲಿ ಐವರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆಗಳ ಕುರಿತು ಗಂಟೆಗೊಮ್ಮೆ ಪರಿಶೀಲನೆ ನಡೆಸುವಂತೆ ಸರ್ಕಾರ ಸೂಚಿಸಿದೆ.
ಮುಖ್ಯಮಂತ್ರಿಗಳ ನಿರ್ದೇಶನದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತೆ ವಿಘ್ನೇಶ್ವರಿ ಅವರು ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮಾಡಿದರು. ಸಾರ್ವಜನಿಕರಿಗೆ ಎಸ್‌ಎಂಎಸ್ ಮೂಲಕ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನಿಸಲಾಗಿದ್ದು, ಅಗತ್ಯ ಬಿದ್ದಲ್ಲಿ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಲಪ್ಪುರಂ ಜಿಲ್ಲೆಯ ನಿಲಂಬೂರ್–ಅಮರಂಬಲಂ ಪ್ರದೇಶದ ಕೊಟ್ಟಪ್ಪುಳ ನದಿಯಲ್ಲಿ ಸ್ನಾನಕ್ಕಿಳಿದಿದ್ದ ವಂದೂರ್ ಮೂಲದ ಐವರ ತಂಡ ದಿಢೀರ್ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದೆ. ಸ್ಥಳೀಯರೊಬ್ಬರು ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದು, ನಾಪತ್ತೆಯಾಗಿರುವ ಮತ್ತಿಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ಕೊಟ್ಟಾಯಂ ಜಿಲ್ಲೆಯ ಟೀಕೋಯ್ ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಸ್ಕೂಟರ್‌ನಲ್ಲಿ ವಾಗಮೋನ್‌ನಿಂದ ಹಿಂದಿರುಗುತ್ತಿದ್ದ ಚೆನ್ನೈನ ಜವಾಹರ್ ನಗರದ ನಿವಾಸಿ ಸಂಗೀತಾ ಅರುಲ್ ಲಾಲ್ (35) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಅವರೊಂದಿಗೆ ಇದ್ದ ಸ್ನೇಹಿತ ಗಾಯಗೊಂಡು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಡುಕ್ಕಿ ಜಿಲ್ಲೆಯ ಕೊಟ್ಟಕಂಬೂರಿನಲ್ಲಿ ಶೆಡ್‌ನಲ್ಲಿ ಆಶ್ರಯ ಪಡೆದಿದ್ದ ಮೂವರ ಮೇಲೆ ಬೆಟ್ಟದ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ, ಮುಂದಿನ ನಾಲ್ಕು ದಿನಗಳ ಕಾಲ ಕೇರಳದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ತೀವ್ರ ಹಾನಿಗೊಳಗಾಗಿರುವ ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಳೆ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.