ಆಯುಷ್ಮಾನ್ ಭಾರತ್ ಫಲಾನುಭವಿ ತೇಜಾವತಿ ಮನೆಯಲ್ಲಿ ‘ಆಶೀರ್ವಾದದ ದೀಪ’ ಪ್ರಜ್ವಲನ
ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಗೆ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಅವರ 76ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ‘ಆಶೀರ್ವಾದದ ದೀಪ’ ಕಾರ್ಯಕ್ರಮವು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂದುಬೆಟ್ಟುವಿನ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿ ತೇಜಾವತಿ ಅವರ ನಿವಾಸದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತೇಜಾವತಿ, ಸುಮಾರು 23 ವರ್ಷಗಳಿಂದ ಆಮವಾತ ಕಾಯಿಲೆಯಿಂದ ಬಳಲುತ್ತಿದ್ದು, ನಡೆಯಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು ₹3.5 ಲಕ್ಷ ವೆಚ್ಚದಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆದ ಬಳಿಕ ಇದೀಗ ನಡೆದಾಡಲು ಹಾಗೂ ನಿತ್ಯದ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ತಮ್ಮ ಬದುಕಿಗೆ ಆಶಾಕಿರಣವಾಗಿ ಮೂಡಿಬಂದು ಆತ್ಮವಿಶ್ವಾಸ ತುಂಬಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಗವಂತ ದೀರ್ಘಾಯುಷ್ಯ, ಆರೋಗ್ಯ ಹಾಗೂ ಶ್ರೇಯಸ್ಸು ನೀಡಲಿ ಎಂದು ಪ್ರಾರ್ಥಿಸಿ ‘ಆಶೀರ್ವಾದದ ದೀಪ’ ಬೆಳಗಿಸಿದರು.
ಜಿಲ್ಲಾ ಮಟ್ಟದ ‘ಆಶೀರ್ವಾದದ ದೀಪ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳ ಫಲಾನುಭವಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಿಲ್ಲೆಯಾದ್ಯಂತ ತಮ್ಮ ಮನೆಗಳಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ, ಆರೋಗ್ಯ ಮತ್ತು ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ ಎಂದರು.
ಮುಂದಿನ ಒಂದು ತಿಂಗಳ ಕಾಲ ನಡೆಯಲಿರುವ ‘ಸೇವಾ ಸಂಕಲ್ಪ ಅಭಿಯಾನ’ದ 13 ಕಾರ್ಯಕ್ರಮಗಳನ್ನು ಎಲ್ಲರ ಸಹಕಾರದಿಂದ ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಹಿರಿಯ ಕೃಷಿಕರಾದ ಕಮಲ ಪೂಜಾರ್ತಿ, ಕೃಷ್ಣಪ್ಪ ಬೆಲ್ಚಡ ಹಾಗೂ ಸಿಆರ್‌ಪಿಎಫ್ ತರಬೇತಿ ಪಡೆದು ದೇಶ ಸೇವೆಗೆ ಸಜ್ಜಾಗಿರುವ ಕೃಷ್ಣ ಪಂದುಬೆಟ್ಟು ಅವರನ್ನು ಸನ್ಮಾನಿಸಲಾಯಿತು.
ಅಭಿಯಾನದ ಜಿಲ್ಲಾ ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೆ. ಉದಯ ಕುಮಾರ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಶಿಲ್ಪಾ ಜಿ. ಸುವರ್ಣ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

