ನಾವು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ: ಸಿಎಂ ಡಿಕೆಶಿ
“ನಾವು ಜನರ ಬದುಕಿನ ಮೇಲೆ ರಾಜಕೀಯ ಮಾಡುವವರೇ ಹೊರತು, ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಹೀಗಾಗಿ ಯಾವುದೇ ಪಕ್ಷದವರೂ ಗಾಬರಿಯಾಗುವ ಅಗತ್ಯವಿಲ್ಲ. ಅಭಿವೃದ್ಧಿಯೇ ನಮ್ಮ ಮುಖ್ಯ ಚಿಂತನೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಅವರು ಶುಕ್ರವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ತಮ್ಮ ಬೆಳಗಿನ ವೇಳಾಪಟ್ಟಿಯ ಕುರಿತು ಮಾತನಾಡಿದ ಸಿಎಂ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಂಗಿದ್ದ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದರು. ಬಳಿಕ ಮಂಗಳೂರಿನ ಪ್ರಸಿದ್ಧ ಬನ್ಸ್, ದೋಸೆ ಸೇರಿದಂತೆ ಕರಾವಳಿಯ ತಿಂಡಿಗಳನ್ನು ಸವಿದಿರುವುದಾಗಿ ಹೇಳಿ, ಕರಾವಳಿಯ ಆತಿಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿಗೆ ಕರೆದುಕೊಂಡು ಹೋಗುತ್ತಾರೋ ಅಲ್ಲೆಲ್ಲಾ ಹೋಗುತ್ತೇನೆ. ಕರಾವಳಿಯ ಆತಿಥ್ಯ ನನಗೆ ಅತ್ಯಂತ ಸಂತೋಷ ತಂದಿದೆ” ಎಂದರು.
ಕರಾವಳಿ ಭಾಗದಲ್ಲಿ ಸರ್ಕಾರದ ನಡೆ ಕುರಿತು ಬಿಜೆಪಿ ವ್ಯಕ್ತಪಡಿಸುತ್ತಿರುವ ಆತಂಕದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೂ, ಯಾವುದೇ ಪಕ್ಷದವರೂ ಗಾಬರಿಯಾಗಬೇಕಾದ ಅಗತ್ಯವಿಲ್ಲ. ನಮಗೆ ಜನರ ಬದುಕು ಅತ್ಯಂತ ಮುಖ್ಯ. ಜನರ ಬದುಕಿನ ಸ್ಥಿತಿಗತಿಗಳನ್ನು ಬದಲಾಯಿಸಲು ನಾವು ಬಂದಿದ್ದೇವೆಯೇ ಹೊರತು, ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದರು.
ಕರಾವಳಿ ಮತ್ತು ಮಲೆನಾಡು ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯೇ ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.