ಸಾಂಪ್ರದಾಯಿಕ ಕಂಬಳಕ್ಕೆ ಹೆಚ್ಚಿನ ಅನುದಾನ ನೀಡಿ: ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ
Thursday, September 17, 2026
ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಗ್ರಹಿಸಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಕಂಬಳಗಳು ಉಳಿಯಬೇಕಾದರೆ ಹಾಗೂ ಕಂಬಳದ ಗತವೈಭವ ಮತ್ತೆ ಮರುಕಳಿಸಬೇಕಾದರೆ ಸರ್ಕಾರದಿಂದ ಹೆಚ್ಚಿನ ಅನುದಾನ ಅಗತ್ಯವಾಗಿದೆ. ಸಾಂಪ್ರದಾಯಿಕ ಕಂಬಳಕ್ಕೆ ಅನುದಾನ ನೀಡುವಂತೆ ಹಲವು ಬಾರಿ ಹೋರಾಟ ನಡೆಸಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಈ ಬಾರಿಯಾದರೂ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಅವರು ಸಾಂಪ್ರದಾಯಿಕ ಕಂಬಳಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬೇಕು. ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ, ಕಾರ್ಯಕಾರಿ ಸಮಿತಿ ಸದಸ್ಯ ಅಭಿಜಿತ್ ಪಾಂಡೇಶ್ವರ ಮೊದಲಾದವರು ಉಪಸ್ಥಿತರಿದ್ದರು.
