ಜಾತಿ ತಾರತಮ್ಯ ವಿರುದ್ದ ಪ್ರತಿಭಟಿಸಿದ್ದ ರಾಹುಲ್ ಗಾಂಧಿ ಮೇಲೆ ಎಫ್ಐಆರ್: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
Tuesday, September 01, 2026
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿ ಕಾರ್ಯಕರ್ತರು ಮಾಡಿರುವ ಅವಮಾನವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಮೂಲಕ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್‌ನಲ್ಲಿ ಜಮಾಯಿಸಿ ಪ್ರತಿಭಟನಾ ಸಭೆ ನಡೆಸಿದರು. ಜಾತಿ ತಾರತಮ್ಯ ಮತ್ತು ಸಾಮಾಜಿಕ ಅನ್ಯಾಯದ ವಿರುದ್ಧ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ನಾಯಕರ ಮೇಲೆ ಪ್ರಕರಣ ದಾಖಲಿಸುವುದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರರಾದ ವೆರೊನಿಕಾ ಕರ್ನೆಲಿಯೋ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಗಣನಾಥ ಎಕ್ಕಾರ್, ಪ್ರಖ್ಯಾತ್ ಶೆಟ್ಟಿ, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
