ಉಡುಪಿ: ವಿಟ್ಲಪಿಂಡಿ ಮಹೋತ್ಸವಕ್ಕೆ ಬಿಗಿ ಬಂದೋಬಸ್ತ್: ಡ್ರೋನ್, ಸಿಸಿಟಿವಿ ಕಣ್ಗಾವಲು
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಾಗೂ ವಿಟ್ಲ ಪಿಂಡಿ ಅಂಗವಾಗಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಮಹೋತ್ಸವದ ಭದ್ರತಾ ಕಾರ್ಯಕ್ಕಾಗಿ ಒಟ್ಟು ಒಬ್ಬರು ಪೊಲೀಸ್ ಅಧೀಕ್ಷಕರು (ಎಸ್‌ಪಿ), ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 25 ಮಂದಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳು, 35 ಮಂದಿ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ಗಳು ಹಾಗೂ 186 ಮಂದಿ ಹೆಡ್ ಕಾನ್‌ಸ್ಟೇಬಲ್, ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ 50 ಮಂದಿ ಗೃಹರಕ್ಷಕ ದಳದ ಸಿಬ್ಬಂದಿಯನ್ನೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ ಒಂದು ಕೆಎಸ್‌ಆರ್‌ಪಿ ತುಕಡಿ, ಒಂಬತ್ತು ಡಿಎಆರ್ ತುಕಡಿಗಳು, ಮೂರು ಅಗ್ನಿಶಾಮಕ ದಳದ ತಂಡಗಳು, ಎರಡು ಆಂಬ್ಯುಲೆನ್ಸ್‌ಗಳು ಹಾಗೂ ಮೂರು ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ.
ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ವಾಹನಗಳ ಸುಗಮ ಪಾರ್ಕಿಂಗ್‌ಗಾಗಿ ಎಂ.ಜಿ.ಎಂ. ಮೈದಾನ, ಶ್ರೀಕೃಷ್ಣ ಮಠ ರಾಜಾಂಗಣ ಪಾರ್ಕಿಂಗ್ ಸ್ಥಳ, ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್ ಸ್ಥಳ, ಬೀಡಿನಗುಡ್ಡೆ ಮೈದಾನ, ಬೀಡಿನಗುಡ್ಡೆ ಕ್ರೀಡಾಂಗಣ, ವಿದ್ಯೋದಯ ಶಾಲೆ ಪಾರ್ಕಿಂಗ್ ಸ್ಥಳ ಹಾಗೂ ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ.
ಜನಸಂದಣಿ ನಿಯಂತ್ರಣ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಕ್ಕಪಡೆ ಮತ್ತು ಸ್ವಯಂಸೇವಕರ ಸೇವೆಯನ್ನೂ ಬಳಸಿಕೊಳ್ಳಲಾಗಿದೆ.
ಮಹೋತ್ಸವದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಗರದ ವಿವಿಧ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರ ಕಣ್ಗಾವಲು ನಡೆಸಲಾಗುತ್ತಿದೆ. ಅಲ್ಲದೆ, 12 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.
ಹಿಂದಿನ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರ ಗುರುತಿಸುವಿಕೆ ಹಾಗೂ ನಿಗಾವಹಣಕ್ಕಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳನ್ನು ಬಳಸಲಾಗುತ್ತಿದ್ದು, ಡ್ರೋನ್ ಕ್ಯಾಮೆರಾಗಳ ಮೂಲಕ ಮಹೋತ್ಸವ ನಡೆಯುವ ಸಂಪೂರ್ಣ ಪ್ರದೇಶದ ಮೇಲೆ ಹದ್ದಿನ ಕಣ್ಣು ಇರಿಸಲಾಗುತ್ತಿದೆ.
ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಸಂಚಾರ ನಿಯಮಗಳನ್ನು ಪಾಲಿಸುವುದರೊಂದಿಗೆ ಪೊಲೀಸ್ ಇಲಾಖೆಯ ಸೂಚನೆಗಳನ್ನು ಅನುಸರಿಸಿ ವಿಟ್ಲ ಪಿಂಡಿ ಮಹೋತ್ಸವವನ್ನು ಶಾಂತಿಯುತ ಹಾಗೂ ಸುರಕ್ಷಿತವಾಗಿ ಯಶಸ್ವಿಗೊಳಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.