ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಮಂಗಳೂರು ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ
Friday, September 18, 2026
ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಸಿಎಂ ಡಿ.ಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದ್ದಾರೆ.
ಮಂಗಳೂರಿನ ಪ್ರಜಾಸೌಧದಲ್ಲಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.
ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ 16 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಲಾಗಿದ್ದು, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೂ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಕುರಿತು ಸಾರ್ವಜನಿಕರಿಂದ ಒಂದು ತಿಂಗಳ ಕಾಲ ಅಭಿಪ್ರಾಯ ಸಂಗ್ರಹಿಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕರಾವಳಿ ಭಾಗದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಪ್ರತ್ಯೇಕ ಕರಾವಳಿ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದರು. ಕರಾವಳಿಯ ಮೂಲಸೌಕರ್ಯ, ಪ್ರವಾಸೋದ್ಯಮ ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಅವರು ತಿಳಿಸಿದರು.