ಜೋಕಟ್ಟೆ ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಆರು ಮಂದಿಗೆ ಗಾಯ
Wednesday, September 30, 2026
ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಆವರಣದಲ್ಲಿರುವ ಸಿಎಚ್‌ಟಿ (ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್) ಮೂರನೇ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.
ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬವರಿಗೆ ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ಪ್ರಕಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.