ಅರ್ಧಕ್ಕೆ ನಿಂತ ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಮಸ್ಯೆ ಬಗೆಹರಿಸಲು ಉಸ್ತುವಾರಿ ಸಚಿವರ ಮೊರೆ
ಉಡುಪಿಯ ಪರ್ಕಳದಲ್ಲಿ ಅರ್ಧಕ್ಕೆ ನಿಂತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಹಳೆಯ ರಸ್ತೆಯನ್ನೇ ಅಗಲೀಕರಿಸಿ ಕಾಮಗಾರಿ ಮುಂದುವರಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರಲ್ಲಿ ಪರ್ಕಳ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.
ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲಿ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಿವಾರ್ಯವಾಗಿ ಹಳೆಯ ಕಿರಿದಾದ ರಸ್ತೆಯಲ್ಲೇ ಸಂಚರಿಸುವಂತಾಗಿದೆ. ರಸ್ತೆ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಪದೇಪದೇ ಅಪಘಾತಗಳು ಸಂಭವಿಸುತ್ತಿವೆ. ಈಗಾಗಲೇ ಈ ರಸ್ತೆಯಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಅಗತ್ಯವಿದೆ ಎಂದು ಮುಖಂಡರು ಸಚಿವರ ಗಮನಕ್ಕೆ ತಂದರು.
ರಾಷ್ಟ್ರೀಯ ಹೆದ್ದಾರಿ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಹೊಸ ರಸ್ತೆಯ ಕಾಮಗಾರಿ ಮುಂದುವರಿಸುವುದು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಹಳೆಯ ರಸ್ತೆಯನ್ನೇ ಅಗಲೀಕರಿಸಿ ಅಭಿವೃದ್ಧಿಪಡಿಸಿ, ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪರ್ಕಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪರ್ಕಳ ಮೋಹನ್ದಾಸ್ ನಾಯಕ್ ಮತ್ತು ಗಣೇಶ್ ರಾಜ್ ಸರಳಬೆಟ್ಟು ಅವರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಡಳಿತಕ್ಕೂ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಇದೀಗ ಮತ್ತೊಮ್ಮೆ ಹಳೆಯ ರಸ್ತೆಯನ್ನೇ ಅಭಿವೃದ್ಧಿಪಡಿಸಿ ಕಾಮಗಾರಿ ಮುಂದುವರಿಸುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೋಹನ್ ದಾಸ್ ನಾಯಕ್, ಜಿಲ್ಲಾಧಿಕಾರಿಗಳು ಶೀಘ್ರವೇ ನ್ಯಾಯಾಲಯದ ಮೊರೆ ಹೋದವರೊಂದಿಗೆ ಮಾತುಕತೆ ನಡೆಸಿ ಸಂಧಾನಕ್ಕೆ ಮುಂದಾಗಬೇಕು. ಸ್ಥಳೀಯರೊಂದಿಗೆ ಚರ್ಚಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಹಳೆಯ ರಸ್ತೆಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.