-->
 ಕರಾವಳಿಯಲ್ಲಿ ಮೊದಲ ಸಚಿವ ಸಂಪುಟ ಸಭೆ ದಿಟ್ಟ ಹೆಜ್ಜೆ: ರಮೇಶ್ ಕಾಂಚನ್

ಕರಾವಳಿಯಲ್ಲಿ ಮೊದಲ ಸಚಿವ ಸಂಪುಟ ಸಭೆ ದಿಟ್ಟ ಹೆಜ್ಜೆ: ರಮೇಶ್ ಕಾಂಚನ್


ಕರಾವಳಿಯ ಜನರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ವಿಚಾರಗಳಿಗೆ ಹೆಚ್ಚಿನ ಗಮನ ದೊರೆಯುವ ನಿರೀಕ್ಷೆಯಿದೆ. ಸಮುದ್ರ, ಬಂದರು, ಮೀನುಗಾರಿಕೆ, ಕೃಷಿ, ಪ್ರವಾಸೋದ್ಯಮ, ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಕರಾವಳಿಗೆ ಅಪಾರ ಸಾಮರ್ಥ್ಯವಿದ್ದು, ಈ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಕರಾವಳಿಯ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿ, ಮೀನುಗಾರರ ಸಮಸ್ಯೆಗಳು, ಪ್ರವಾಸೋದ್ಯಮ, ಪರಿಸರಸ್ನೇಹಿ ಕೈಗಾರಿಕೆಗಳಿಗೆ ಉತ್ತೇಜನ ಹಾಗೂ ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ಮೀನುಗಾರಿಕಾ ಬಂದರು, ಜೆಟ್ಟಿ, ಶೀತಲೀಕರಣ ವ್ಯವಸ್ಥೆ, ಮೀನು ಸಂಸ್ಕರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಬಲಪಡಿಸುವ ಮೂಲಕ ಮೀನುಗಾರರ ಆದಾಯ ಮತ್ತು ಜೀವನಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ರಮೇಶ್ ಕಾಂಚನ್ ಅಭಿಪ್ರಾಯಪಟ್ಟರು.

ಕರಾವಳಿಯ ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯವಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲೂ ಕಡಲತೀರ, ದೇವಾಲಯ, ನದಿ, ದ್ವೀಪ ಹಾಗೂ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದರು.

ಭತ್ತ, ತೆಂಗು, ಅಡಿಕೆ, ಕಾಳುಮೆಣಸು, ಗೋಡಂಬಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ಅವಲಂಬಿಸಿರುವ ರೈತರ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ, ನೆರೆ ಹಾಗೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಮರಳು ಸಮಸ್ಯೆ, ಕೆಂಪುಕಲ್ಲು ಮತ್ತು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಕರಾವಳಿಯ ಮೂರು ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಅಗತ್ಯಗಳನ್ನು ಪರಿಗಣಿಸಿ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆಗಳನ್ನು ನೀಡಲು ಈ ಸಚಿವ ಸಂಪುಟ ಸಭೆ ಅವಕಾಶ ಕಲ್ಪಿಸಲಿದೆ. ಕರಾವಳಿಯ ಸಮಗ್ರ ಅಭಿವೃದ್ಧಿಗೆ ಈ ಸಭೆ ಮಹತ್ವದ ವೇದಿಕೆಯಾಗಲಿದೆ ಎಂದು ರಮೇಶ್ ಕಾಂಚನ್ ಸಂತಸ ವ್ಯಕ್ತಪಡಿಸಿದರು.

Ads on article

Advertise in articles 1

advertising articles 2

Advertise under the article