ಖರ್ಗೆ ಭಾಷಣ ಸ್ಥಳ ಶುದ್ಧೀಕರಣ- ಬಿಜೆಪಿಗರಿಂದ ಅಸ್ಪೃಶ್ಯತೆ ಮತ್ತೆ ಸೃಷ್ಟಿಸುವ ಪ್ರಯತ್ನ: ವಿನಯಕುಮಾರ್ ಸೊರಕೆ
ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಶುದ್ಧೀಕರಿಸಿರುವುದು ದೇಶವನ್ನು 18ನೇ ಶತಮಾನಕ್ಕೆ ಕೊಂಡೊಯ್ಯುವ ಪ್ರಯತ್ನವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆಕ್ರೋಶ ವ್ಯಕ್ತಪಡಿಸಿದರು.
ಅವರು ಉಡುಪಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ನಾಯಕರನ್ನು ಅವಮಾನಿಸುವ ಉದ್ದೇಶದಿಂದ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ದೇಶದ 140 ಕೋಟಿ ಜನರಿಗೆ ಮಾಡಿದ ಅವಮಾನವಾಗಿದೆ. ಇದು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ಮಾಡಿದ ಅವಮಾನವೂ ಹೌದು. ಅಸ್ಪೃಶ್ಯತೆ ಮತ್ತು ಅಸಮಾನತೆಯನ್ನು ಮತ್ತೆ ಸೃಷ್ಟಿಸುವ ಇಂತಹ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಅವರು ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲಾಗುತ್ತಿದೆ. ಕಳ್ಳನಿಗೆ ರಕ್ಷಣೆ ನೀಡುವುದು ಮೋದಿ ಸರ್ಕಾರದ ಸಾಧನೆ ಎಂದು ಅವರು ವ್ಯಂಗ್ಯವಾಡಿದರು. ಈ ಘಟನೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಮೌನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ವಿನಯಕುಮಾರ್ ಸೊರಕೆ ತಿಳಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್,ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪ್ರಚಾರ ಸಮಿತಿ ಪ್ರಮುಖರಾದ ಡಾ. ಸುಬ್ರಹ್ಮಣ್ಯ ಭಟ್, ಪ್ರಶಾಂತ್ ಪೂಜಾರಿ, ರಾಜೇಶ್ ಶೆಟ್ಟಿ, ದಿನಕರ್ ಶೆಟ್ಟಿ, ದಯಾನಂದ, ಚಂದ್ರಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು,.