ಬೆಳ್ವೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ‘ಅಂಗನ್ ಕಾ ಮಿಲನ್’
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವಾ ಪಯಣವು ಅಂತ್ಯೋದಯದಿಂದ ಸರ್ವೋದಯದತ್ತ ಸಾಗುತ್ತಿದೆ ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಬೆಳ್ವೆಯ ವಾಸುಕಿ ಸಭಾಭವನದಲ್ಲಿ ಆಯೋಜಿಸಿದ್ದ ‘ಅಂಗನ್ ಕಾ ಮಿಲನ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಸುಕನ್ಯಾ ಸಮೃದ್ಧಿ ಹಾಗೂ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳು ಅಂಗನವಾಡಿ ಕೇಂದ್ರಗಳ ಮೂಲಕ ಸಮಾಜದ ಕಟ್ಟಕಡೆಯ ಮಗುವಿನವರೆಗೂ ತಲುಪುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ಸಂಸ್ಕಾರ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳು ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ನೀಡಿವೆ. ಅಂಗನವಾಡಿ ವ್ಯವಸ್ಥೆಯನ್ನು ಭವಿಷ್ಯದ ಭಾರತ ನಿರ್ಮಾಣದ ಸಂಸ್ಕಾರ ಕೇಂದ್ರವಾಗಿ ಪರಿಗಣಿಸಿ ಮಹಿಳಾ ಮೋರ್ಚಾ ನಡೆಸುತ್ತಿರುವ ಸೇವಾ ಕಾರ್ಯ ಶ್ಲಾಘನೀಯ ಎಂದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪವಾಗಿದ್ದಾರೆ. ಅವರ ಸೇವೆಯನ್ನು ಗುರುತಿಸುವ ಉದ್ದೇಶದಿಂದ ‘ಅಂಗನ್ ಕಾ ಮಿಲನ್’ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಸೇವೆಯೇ ಸಂಘಟನೆ’ ಎಂಬ ಧ್ಯೇಯದೊಂದಿಗೆ ಮಹಿಳಾ ಮೋರ್ಚಾ ವಿವಿಧ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ 23 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಸಾಂಕೇತಿಕವಾಗಿ ಕಲಿಕಾ ಪರಿಕರಗಳನ್ನು ವಿತರಿಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಅನಿಸಿಕೆಗಳನ್ನು ಆಲಿಸಲಾಯಿತು.
ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಸ್ಥಳೀಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಧಾ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಜ್ಯೋತಿ ರಮೇಶ್ ವಂದಿಸಿದರು. ಕುಂದಾಪುರ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.


