ಉಡುಪಿಯಲ್ಲಿ ವಿದ್ಯುತ್ ಮೂಲಸೌಕರ್ಯಕ್ಕೆ 15 ಕೋಟಿ ಅನುದಾನಕ್ಕೆ ಯಶ್ಪಾಲ್ ಸುವರ್ಣ ಮನವಿ
ಉಡುಪಿಯಲ್ಲಿ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಖಚಿತಪಡಿಸುವ ನಿಟ್ಟಿನಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಸಮಗ್ರವಾಗಿ ಬಲಪಡಿಸಲು ಮೆಸ್ಕಾಂಗೆ 15 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂಧನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಗರೀಕರಣ, ಹೊಸ ಬಡಾವಣೆಗಳ ನಿರ್ಮಾಣ ಹಾಗೂ ವಾಣಿಜ್ಯ ಚಟುವಟಿಕೆಗಳ ವಿಸ್ತರಣೆಯಿಂದ ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಆದರೆ ಹಲವು ಪ್ರದೇಶಗಳಲ್ಲಿ ಕಡಿಮೆ ವೋಲ್ಟೇಜ್, ವಿದ್ಯುತ್ ವ್ಯತ್ಯಯ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ಹೆಚ್ಚಿನ ಒತ್ತಡದಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಶೇಷ ಅನುದಾನದ ಮೂಲಕ ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವುದು, ಹಾಲಿ ಟ್ರಾನ್ಸ್‌ಫಾರ್ಮರ್‌ಗಳ ಸಾಮರ್ಥ್ಯ ಹೆಚ್ಚಿಸುವುದು, ಹಳೆಯ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಹೊಸ ಕೇಬಲ್ ಮತ್ತು ವಿತರಣಾ ಮಾರ್ಗಗಳನ್ನು ನಿರ್ಮಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಅದೇ ರೀತಿ ವಿದ್ಯುತ್ ಬೇಡಿಕೆ ಹೆಚ್ಚಿರುವ ಪ್ರದೇಶಗಳಲ್ಲಿ ಹೊಸ ಸಬ್‌ಸ್ಟೇಷನ್‌ಗಳ ನಿರ್ಮಾಣ, ಹಾಲಿ ಸಬ್‌ಸ್ಟೇಷನ್‌ಗಳ ಮೇಲ್ದರ್ಜೆಗೇರಿಸುವಿಕೆ, ಕಡಿಮೆ ವೋಲ್ಟೇಜ್ ಸಮಸ್ಯೆಗೆ ಶಾಶ್ವತ ಪರಿಹಾರ ಹಾಗೂ ವೇಗವಾಗಿ ಬೆಳೆಯುತ್ತಿರುವ ಹೊಸ ಬಡಾವಣೆಗಳಿಗೆ ಅಗತ್ಯ ವಿದ್ಯುತ್ ಮೂಲಸೌಕರ್ಯ ಕಲ್ಪಿಸುವುದು ಪ್ರಮುಖ ಆದ್ಯತೆಯಾಗಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ರಸ್ತೆ ದೀಪ ಮತ್ತು ಹೈಮಾಸ್ಟ್ ದೀಪಗಳ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಉಡುಪಿ ನಗರವು ಜಿಲ್ಲಾ ಕೇಂದ್ರವಾಗಿರುವುದರಿಂದ ಪ್ರಸ್ತುತ ಮಾತ್ರವಲ್ಲದೆ ಮುಂದಿನ ಹಲವು ವರ್ಷಗಳ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ.
ಆದ್ದರಿಂದ ಮೆಸ್ಕಾಂಗೆ 15 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಕ್ಷೇತ್ರದಲ್ಲಿ ಅಗತ್ಯವಿರುವ ವಿದ್ಯುತ್ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂಧನ ಸಚಿವರನ್ನು ಒತ್ತಾಯಿಸಿದ್ದಾರೆ.