-->
 ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ


ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲಿ ಸ್ಥಾಪಿಸಬೇಕೆಂದು ಆಗ್ರಹಿಸಿ, ಉಡುಪಿ ಜಿಲ್ಲೆ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ವತಿಯಿಂದ ಅಕ್ಟೋಬರ್ 17ರಂದು ಬೆಳಿಗ್ಗೆ 10.30ಕ್ಕೆ ಬ್ರಹ್ಮಾವರದ ಬಂಟರ ಭವನದ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಹಾಗೂ ವಕೀಲ ಪ್ರೇಮ್ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್ 29ರಂದು ತ್ರಿಸದಸ್ಯ ನ್ಯಾಯಾಧೀಶರ ಸಮಿತಿಯನ್ನು ರಚಿಸಿರುವುದನ್ನು ಹೋರಾಟ ಸಮಿತಿ ಸ್ವಾಗತಿಸುತ್ತದೆ ಎಂದರು.

ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಒಳಗೊಂಡ ಸಮಿತಿಯು ಈ ಬೇಡಿಕೆಯನ್ನು ಪರಿಶೀಲಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಉಡುಪಿ ಜಿಲ್ಲೆಯು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೂ ಕೇಂದ್ರಬಿಂದುವಾಗಿದ್ದು, ನೆರೆಯ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ತಾಲೂಕುಗಳಿಗೂ ಸಮೀಪದಲ್ಲಿದೆ. ಹೀಗಾಗಿ, ಕರಾವಳಿ ಭಾಗಕ್ಕೆ ಉದ್ದೇಶಿತ ಸಂಚಾರಿ ಅಥವಾ ಶಾಶ್ವತ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲೇ ಸ್ಥಾಪಿಸಬೇಕು ಎಂಬುದು ಸಮಿತಿಯ ಬಲವಾದ ಆಗ್ರಹವಾಗಿದೆ ಎಂದು ಹೇಳಿದರು.

ನ್ಯಾಯಕ್ಕಾಗಿ ಕರಾವಳಿ ಭಾಗದಿಂದ ಬೆಂಗಳೂರಿನ ಹೈಕೋರ್ಟ್‌ಗೆ ತೆರಳಬೇಕಾಗಿರುವ ಸಾವಿರಾರು ಕಕ್ಷಿದಾರರಿಗೆ ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಪ್ರಕರಣಗಳ ವಿಚಾರಣೆಗಾಗಿ ದೂರದ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಕಡಿಮೆಯಾಗುವುದರೊಂದಿಗೆ, ಸಾರ್ವಜನಿಕರು ಹಾಗೂ ಸಾಮಾನ್ಯ ಕುಟುಂಬಗಳ ಅಮೂಲ್ಯ ಸಮಯ, ಶ್ರಮ ಮತ್ತು ಹಣಕಾಸಿನ ವೆಚ್ಚವೂ ಉಳಿತಾಯವಾಗಲಿದೆ ಎಂದು ತಿಳಿಸಿದರು.

ಪ್ರಾದೇಶಿಕ ಮಟ್ಟದಲ್ಲಿ ಹೈಕೋರ್ಟ್ ಪೀಠ ಕಾರ್ಯನಿರ್ವಹಿಸುವುದರಿಂದ ನ್ಯಾಯದಾನ ಪ್ರಕ್ರಿಯೆ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ. ಅಲ್ಲದೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಗಳು ಹೆಚ್ಚು ಜವಾಬ್ದಾರಿಯುತವಾಗಿ ಮತ್ತು ಚುರುಕಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಗೆ ಹೆಚ್ಚಿನ ಸಾರ್ವಜನಿಕ ಬೆಂಬಲ ಕ್ರೋಡೀಕರಿಸುವುದು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ವಕೀಲರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಮತ್ತು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಪ್ರೇಮ್ ಪ್ರಸಾದ್ ಶೆಟ್ಟಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಶೇಖರ್ ಹಾವಂಜೆ, ಆಲ್ವಿನ್ ಅಂದ್ರಾದೆ, ಮಹೇಶ್ ತಡೆಕಲ್ಲು, ರವಿರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article