ಕರಾವಳಿಯಲ್ಲಿ 2 ದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಮಳೆ
ರಾಜ್ಯದಲ್ಲಿ ಹಲವೆಡೆ ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ಭಾರೀ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ ಕಡೆಗಳಲ್ಲಿ ಭಾರೀ ಸಿಡಿಲು ಸಹಿತ ಮಳೆ ಸುರಿದಿದೆ. ಇಂದು ಕೂಡಾ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಮುನ್ಸೂಚನೆ ಇದೆ.
ಮುಂದಿನ ಎರಡು ದಿನಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಈ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.