-->
ರಮೇಶ್ ಕಾಂಚನ್ ಜನ್ಮದಿನ: ಬೃಹತ್ ರಕ್ತದಾನ ಶಿಬಿರ, 200 ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

ರಮೇಶ್ ಕಾಂಚನ್ ಜನ್ಮದಿನ: ಬೃಹತ್ ರಕ್ತದಾನ ಶಿಬಿರ, 200 ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ


ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.


ರಮೇಶ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ವಿಕಲಾಂಗರಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ. ಇಂತಹ ಸಮಾಜಮುಖಿ ಕಾರ್ಯಕ್ಕೆ ರಮೇಶ್ ಕಾಂಚನ್ ಚಾಲನೆ ನೀಡಿರುವುದು ಶ್ಲಾಘನೀಯ. ಜತೆಗೆ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯವೂ ಮಹತ್ವದ್ದಾಗಿದೆ ಎಂದರು.

ಕಾಂಗ್ರೆಸ್ ಪಕ್ಷವು ಬಡವರ ಪರವಾಗಿ ನಿಂತು ಜನರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿಯಾಗಿವೆ. ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೂರು ತಿಂಗಳೊಳಗೆ ಈಡೇರಿಸುವ ಮೂಲಕ ಸರ್ಕಾರ ತನ್ನ ಜನಪರ ಬದ್ಧತೆಯನ್ನು ಪ್ರದರ್ಶಿಸಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರು ಟೀಕೆ ಮಾಡಿದರೂ, ಫಲಾನುಭವಿಗಳು ಈ ಯೋಜನೆಗಳನ್ನು ಮುಂದುವರಿಸಬೇಕೆಂದು ಬಯಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಜನಪರ ಯೋಜನೆಗಳನ್ನು ಇನ್ನಷ್ಟು ಜನರಿಗೆ ತಲುಪಿಸುವ ಕಾರ್ಯವಾಗಬೇಕು. ಸರ್ವಜನರ ಏಳಿಗೆಗಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.


ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ರಮೇಶ್ ಕಾಂಚನ್ ಅವರಿಂದ ಕಲಿಯಬಹುದು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಮೇಶ್ ಕಾಂಚನ್ ಅವರನ್ನು ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಶಾಲು ಹೊದಿಸಿ, ಪೇಟ ತೊಡಿಸಿ ಗೌರವಿಸಲಾಯಿತು. ತಾಲೂಕು ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ನಗರಸಭಾ ಸದಸ್ಯರಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿರುವ ಅವರು, ಪ್ರಸ್ತುತ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.


ಇದೇ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ನೂತನ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾರ್, ಕುಶಲಕರ್ಮಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಭುಜಂಗ ಶೆಟ್ಟಿ, ಪ್ರಶಾಂತ್ ಜತ್ತನ್, ರಾಜು ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್, ದಿವಾಕರ್ ಕುಂದರ್, ಉಡುಪಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್, ಮಮತಾ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಅನಿತಾ ಬಾಬು ಪೂಜಾರಿ, ಯುವ ಕಾಂಗ್ರೆಸ್ ಮುಖಂಡರಾದ ಸುದೇಶ್ ಶೆಟ್ಟಿ, ಸಜ್ಜನ್ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೋಯ್ಸನ್ ಬಾನ್ಸ್, ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಬೆಳಗ್ಗಿನಿಂದಲೇ ನೂರಾರು ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ವೇಳೆ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article