ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ: ಸಾರ್ವಜನಿಕರಿಂದ 44 ಅರ್ಜಿಗಳ ಸ್ವೀಕಾರ
Saturday, October 24, 2026
ಉಡುಪಿ ತಾಲೂಕು ಆಡಳಿತ ಹಾಗೂ ಪ್ರಜಾಸೇವೆ ಇಲಾಖೆಯ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಆಂದೋಲನ ಸಭೆಯು ಮುದರಂಗಡಿಯ ವಿದ್ಯಾನಗರ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಒಟ್ಟು 44 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಾರ್ವಜನಿಕರು ರಸ್ತೆ, ದಾರಿದೀಪ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಮೆಸ್ಕಾಂ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನೂ ಸಲ್ಲಿಸಿದರು.
ಕಂದಾಯ ಇಲಾಖೆಯಲ್ಲಿ ಅಕ್ರಮ-ಸಕ್ರಮ, ನಿವೇಶನ, ಹಕ್ಕುಪತ್ರ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕಾಪು ತಹಶೀಲ್ದಾರ್ ಅನಂತ ಶಂಕರ್, ಸಹಾಯಕ ಪೊಲೀಸ್ ಅಧೀಕ್ಷಕಿ ಇಷಿತಾ ಗುಪ್ತಾ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಮುದರಂಗಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಅರುಣ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

