-->
 ದೇಶದಲ್ಲಿ ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಯತ್ನ: ಕೆ.ಎಸ್ ನವೀನ್ ಆರೋಪ

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಯತ್ನ: ಕೆ.ಎಸ್ ನವೀನ್ ಆರೋಪ


ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಪ್ರಕ್ಷುಬ್ಧ ಹಾಗೂ ಅರಾಜಕತೆಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್. ನವೀನ್ ಆರೋಪಿಸಿದರು.

ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪಗಳ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇವಿಎಂ, ಎಸ್‌ಐಆರ್ ಮತ್ತು ವೋಟ್ ಚೋರಿ ವಿಚಾರಗಳಲ್ಲಿ ಅಪಪ್ರಚಾರ ನಡೆಸುತ್ತಿದೆ. ಎಸ್‌ಐಆರ್ ಪ್ರಕ್ರಿಯೆ ಈ ಹಿಂದೆಯೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದು, ಇವಿಎಂ ಪರಿಚಯಿಸಿದವರು ರಾಜೀವ್ ಗಾಂಧಿ. ಆದರೂ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಜನರಲ್ಲಿ ಗೊಂದಲ ಮೂಡಿಸುವ ಹಾಗೂ ಚುನಾವಣಾ ಆಯೋಗದ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ನವೆಂಬರ್ 30ರವರೆಗೆ ಒಂದು ತಿಂಗಳ ಕಾಲ 'ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ' ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಅಭಿಯಾನದಡಿ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪಾದಯಾತ್ರೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ, ವಕೀಲರು ಮತ್ತು ಸಮಾಜಸೇವಕರನ್ನೊಳಗೊಂಡ ವಿಶೇಷ ಸಭೆ, ಗೋಷ್ಠಿ ಸೇರಿದಂತೆ ಎಂಟು ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮೂಲಕವೂ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ನವೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧದಿಂದ ಕದ್ರಿ ಮೈದಾನದವರೆಗೆ ಬೃಹತ್ ಜನಜಾಗೃತಿ ಪಾದಯಾತ್ರೆ ನಡೆಯಲಿದೆ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ತಲಾ ಒಂದು ಸಾವಿರದಂತೆ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಶ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶಶಾಂಕ್ ಶಿವತ್ತಾಯ, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article