ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಮಾಸಿಕ ಸಭೆ: ಫಲಾನುಭವಿಗಳ ಸಮಸ್ಯೆಗಳ ಕುರಿತು ಚರ್ಚೆ
Wednesday, October 14, 2026
ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆಯು ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ, ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಮತ್ತು ಸಹಾಯಕ ನಿರ್ದೇಶಕಿ (ಪ್ರಭಾರ) ಫರ್ಝಾನಾ ಎಂ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಈವರೆಗೆ ಯೋಜನೆಗಳಡಿ ಪ್ರಯೋಜನ ಪಡೆದ ಫಲಾನುಭವಿಗಳ ಮಾಹಿತಿಯನ್ನು ಮಂಡಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಕುರಿತು ಚರ್ಚೆ ನಡೆಯಿತು.
ಸಮಿತಿಯ ಸದಸ್ಯರು ಹಾಗೂ ಗೃಹಲಕ್ಷ್ಮೀ ಸ್ವಸಹಾಯ ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ವಿವರ ಹಾಗೂ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ಪ್ರತಿಯೊಂದು ಯೋಜನೆಯಡಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಹಾಗೂ ಫಲಾನುಭವಿಗಳಿಗೆ ತಲುಪಿರುವ ಮೊತ್ತದ ಬಗ್ಗೆಯೂ ಅಧಿಕಾರಿಗಳಿಂದ ವಿವರಗಳನ್ನು ಕೇಳಿ ತಿಳಿದುಕೊಂಡರು.
ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಯಿತು.

.jpeg)