-->
ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪಕ್ಷಾತೀತ ಒತ್ತಾಯ ಅಗತ್ಯ: ಐವನ್ ಡಿಸೋಜಾ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪಕ್ಷಾತೀತ ಒತ್ತಾಯ ಅಗತ್ಯ: ಐವನ್ ಡಿಸೋಜಾ


ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಒತ್ತಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.


ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಮಂಗಳವಾರ ನಡೆದ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.


ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠಕ್ಕೆ ಅಗತ್ಯವಿರುವ ಮೂಲಸೌಕರ್ಯ, ವಕೀಲರು ಹಾಗೂ ಇತರ ಸಂಪನ್ಮೂಲಗಳು ಈಗಾಗಲೇ ಲಭ್ಯವಿವೆ. ಹೀಗಾಗಿ ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೀಠ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


ಕರಾವಳಿಯಲ್ಲಿ ಐಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಕಂಪನಿಗಳು ಬೆಳೆಯುತ್ತಿದ್ದು, ಇದಕ್ಕೆ ಸಂಬಂಧಿಸಿದ ಕಾನೂನು ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಣ್ಣಪುಟ್ಟ ಕಾನೂನು ವಿಚಾರಗಳಿಗೂ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ಇರುವುದರಿಂದ, ಕರಾವಳಿಯಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಪೀಠ ಸ್ಥಾಪನೆ ಕುರಿತು ರಾಜ್ಯ ಸರ್ಕಾರ ಈಗಾಗಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ. ಬೇಡಿಕೆಯನ್ನು ಪರಿಶೀಲಿಸಲು ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಸಮಿತಿ ರಚಿಸಿದ್ದು, ಸಮಿತಿಯು ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಭೇಟಿ ನೀಡಿ ಮೂಲಸೌಕರ್ಯ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದೆ. ಬಳಿಕ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಿದೆ ಎಂದು ತಿಳಿಸಿದರು.

ಹೈಕೋರ್ಟ್ ಪೀಠದ ಬೇಡಿಕೆ ಯಾವುದೇ ಒಂದು ಪಕ್ಷ ಅಥವಾ ಸಂಘಟನೆಗೆ ಸೀಮಿತವಾದದ್ದಲ್ಲ. ಇದು ಇಡೀ ಕರಾವಳಿ ಭಾಗದ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರ. ಆದ್ದರಿಂದ ರಾಜಕೀಯ ಪಕ್ಷಗಳು, ವಕೀಲರ ಸಂಘಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗೂಡಿ ಪಕ್ಷಾತೀತವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ,

ವಕೀಲರ ಸಂಘದ ಮಾಜಿ ಕಾರ್ಯದರ್ಶಿ ರಾಜೇಶ್ ಎ.ಆರ್., ಮಾಜಿ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ವಕೀಲರಾದ ಸಚಿನ್ ಕುಮಾರ್ ಶೆಟ್ಟಿ, ಮೆಲ್ವಿನ್ ನೊರೋನ್ಹಾ, ಪ್ರಶಾಂತ್ ಪೂಜಾರಿ, ಪದ್ಮಪ್ರಸಾದ್, ರಾಘವೇಂದ್ರ, ಗೌತಮ್ ಹಾಗೂ ಪ್ರವೀಣ್ ಆದ್ಯಪಾಡಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article