-->
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವೈಯಕ್ತಿಕ ನಿಂದನೆ: ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ದೂರು

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವೈಯಕ್ತಿಕ ನಿಂದನೆ: ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ದೂರು

 


ಕಾರ್ಕಳದಲ್ಲಿ ಅ.8ರಂದು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಹಾಗೂ ಪಕ್ಷದ ಮುಖಂಡರ ವಿರುದ್ಧ ವೈಯಕ್ತಿಕ ನಿಂದನೆ ಮತ್ತು ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಸಂಬಂಧ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.


ಅ.5ರಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಅ.8ರಂದು ಕಾರ್ಕಳ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಜಿಲ್ಲೆಯ ಬಿಜೆಪಿ ಸಂಸದರು, ಶಾಸಕರು ಹಾಗೂ ಮುಖಂಡರ ವಿರುದ್ಧ ವೈಯಕ್ತಿಕ ನಿಂದನೆ ಮಾಡಲಾಗಿದೆ ಎಂದು ಮಹಿಳಾ ಮೋರ್ಚಾ ಆರೋಪಿಸಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮತ್ತು ಹೋರಾಟ ನಡೆಸಲು ಸಂವಿಧಾನ ಅವಕಾಶ ನೀಡಿದೆ. ಆದರೆ, ಪ್ರತಿಭಟನೆಯ ಹೆಸರಿನಲ್ಲಿ ರಾಜಕೀಯ ನಾಯಕರ ವೈಯಕ್ತಿಕ ಹಾಗೂ ಕೌಟುಂಬಿಕ ವಿಚಾರಗಳನ್ನು ಪ್ರಸ್ತಾಪಿಸಿ, ಕೀಳುಮಟ್ಟದ ಪದಗಳನ್ನು ಬಳಸಿ ಅವಮಾನಿಸುವುದು ನಾಗರಿಕ ಸಮಾಜದ ಸಭ್ಯತೆಗೆ ವಿರುದ್ಧವಾಗಿದೆ ಎಂದು ಮಹಿಳಾ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ಪರಶುರಾಮ ಥೀಮ್ ಪಾರ್ಕ್ ಸೇರಿದಂತೆ ಸತ್ಯಕ್ಕೆ ದೂರವಾದ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನಪ್ರತಿನಿಧಿಗಳು ಮತ್ತು ಮುಖಂಡರನ್ನು ಅವಾಚ್ಯ ಪದಗಳಿಂದ ನಿಂದಿಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ರಾಜಕೀಯ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸುವವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯನ್ನು ಕಾಪಾಡಬೇಕು. ಬಿಜೆಪಿ ಸಂಸದರು, ಶಾಸಕರು ಹಾಗೂ ಮುಖಂಡರನ್ನು ನಿಂದಿಸಿ ತೇಜೋವಧೆ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಉಡುಪಿ ಜಿಲ್ಲೆಯ ರಾಜಕೀಯ ಸಂಸ್ಕೃತಿ ಮತ್ತು ಘನತೆಯನ್ನು ಉಳಿಸಬೇಕು ಎಂದು ಮಹಿಳಾ ಮೋರ್ಚಾ ಜಿಲ್ಲಾಡಳಿತವನ್ನು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹಾಗೂ ಕಾರ್ಯಕಾರಿಣಿ ಸದಸ್ಯೆ ಮಂಜುಳಾ ಪ್ರಸಾದ್ ಅವರು ಜಿಲ್ಲಾಧಿಕಾರಿಗಳಿಗೆ ಘಟನೆಯ ಕುರಿತು ವಿವರಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜ್ಯೋತಿ ಉದಯ ಪೂಜಾರಿ ಮತ್ತು ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯದರ್ಶಿ ಶೋಭಾ ಭಾಸ್ಕರ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಸುಜಾಲ ಸತೀಶ್ ಮತ್ತು ಮಾಲಿನಿ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಜ್ಯೋತಿ ರಮೇಶ್, ನಿರ್ಮಲಾ ಶೆಟ್ಟಿ, ಮಾಲಿನಿ ಜತ್ತನ್ನ ಹಾಗೂ ವಿದ್ಯಾ ಶ್ಯಾಮಸುಂದರ್, ಉಡುಪಿ ಮಂಡಲ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಅಮೀನ್, ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಪ್ರಧಾನ ಕಾರ್ಯದರ್ಶಿ ಜ್ಯೋತಿ, ಕಾರ್ಕಳ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್ ಸೇರಿದಂತೆ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article