ನೈಜ ಮತದಾರರನ್ನು ಕೈಬಿಟ್ಟು ‘ಓಟ್ ಚೋರಿ’ಗೆ ಬಿಜೆಪಿ ಹುನ್ನಾರ: ಐವನ್ ಡಿಸೋಜ
ನೈಜ ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ‘ಓಟ್ ಚೋರಿ’ ಮಾಡುವ ಮೂಲಕ ಚುನಾವಣೆ ಗೆಲ್ಲಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ಈ ಕುರಿತು ಸಂಪೂರ್ಣ ತನಿಖೆ ನಡೆಯುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್‌ಒಗಳು ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ವಿಶೇಷವಾಗಿ ಅಲ್ಪಸಂಖ್ಯಾತರು, ಎಸ್‌ಸಿ, ಎಸ್‌ಟಿ ಹಾಗೂ ದುರ್ಬಲ ವರ್ಗಗಳ ಮತದಾರರನ್ನು ಗುರಿಯಾಗಿಸಿಕೊಂಡು ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವಂತೆ ಒತ್ತಡ ಹೇರಲಾಗುತ್ತಿದೆ. ಫಾರಂ–7 ಮೂಲಕ ಅರ್ಹ ಮತದಾರರನ್ನೇ ಅನರ್ಹಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಹಾಗೂ ಹೊಸ ನಾಯಕತ್ವವನ್ನು ಬೆಳೆಸುವ ಉದ್ದೇಶದಿಂದ ಎಐಸಿಸಿ ‘ಸಂಘಟನಾ ಸೃಜನ್ ಅಭಿಯಾನ–2’ ಆರಂಭಿಸಿದೆ. ಇದರ ಅಂಗವಾಗಿ ಉಡುಪಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಹಾಗೂ 10 ಬ್ಲಾಕ್‌ಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಬಳಿಕ ಬ್ಲಾಕ್ ಹಾಗೂ ಗ್ರಾಮ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಬಿಜೆಪಿಗರಿಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹೆಸರು ಹೇಳದಿದ್ದರೆ ನಿದ್ರೆ ಬರುವುದಿಲ್ಲ. ಫಾರಂ ನಂಬರ್ 7ರಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮತದಾರರ ಹೆಸರುಗಳನ್ನು ತೋರಿಸಲಿ ಎಂದು ಐವನ್ ಡಿಸೋಜ ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಅಬ್ದುಲ್ ರವೂಫ್, ಶಾಲೇಟ್ ಪಿಂಟೋ, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಶಾಂತ್ ಜತ್ತನ್ನ, ಭಾಸ್ಕರ್ ರಾವ್ ಕಿದಿಯೂರು, ಬಿ. ನರಸಿಂಹಮೂರ್ತಿ ಹಾಗೂ ಜ್ಯೋತಿ ಹೆಬ್ಬಾರ್ ಉಪಸ್ಥಿತರಿದ್ದರು.
