-->
ವಿಧಾನ ಪರಿಷತ್ ಚುನಾವಣೆ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ: ಕುತ್ಯಾರು ನವೀನ್ ಶೆಟ್ಟಿ

ವಿಧಾನ ಪರಿಷತ್ ಚುನಾವಣೆ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ: ಕುತ್ಯಾರು ನವೀನ್ ಶೆಟ್ಟಿ


ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ನಾಲ್ವರು ಅಭ್ಯರ್ಥಿಗಳು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವುದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತ ವೈಫಲ್ಯಕ್ಕೆ ಮತದಾರರು ನೀಡಿದ ಉತ್ತರವಾಗಿದೆ. ಈ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.


ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿಯ ಬಳಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

ದೇಶಾದ್ಯಂತ ಅರಾಜಕತೆ ಸೃಷ್ಟಿಸುವ ನಿಟ್ಟಿನಲ್ಲಿ ಯಾವುದೇ ಸ್ಪಷ್ಟ ಗುರಿಯಿಲ್ಲದ ಹೋರಾಟಗಳು ಹಾಗೂ ಷಡ್ಯಂತ್ರಗಳಲ್ಲಿ ತೊಡಗಿರುವ ಕಾಂಗ್ರೆಸ್‌ಗೆ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ದೇಶದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತ ಬಹಿರಂಗವಾಗತೊಡಗಿದೆ. ಮತಪತ್ರದ ಮೂಲಕ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವುದು ಮತದಾರರು ಆ ಪಕ್ಷಕ್ಕೆ ನೀಡಿದ ಸ್ಪಷ್ಟ ಸಂದೇಶವಾಗಿದೆ. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯಪತಾಕೆಯನ್ನು ಹಾರಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಮೊಳಗಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಗೆಲುವನ್ನು ಸಂಭ್ರಮಿಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸೇರಿದಂತೆ ಜಿಲ್ಲಾ ಹಾಗೂ ನಗರ ಮಟ್ಟದ ವಿವಿಧ ಪದಾಧಿಕಾರಿಗಳು, ಮೋರ್ಚಾಗಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article