ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಯಶ್ಪಾಲ್ ಆಗ್ರಹ
ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ, ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಅಮಾನುಷವಾಗಿ ವರ್ತಿಸಿರುವುದು ಖಂಡನೀಯ. ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಆಡಳಿತ ಪಕ್ಷದ ನಾಯಕರ ಅಣತಿಯಂತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.
ಪ್ರತಿಭಟನೆಯ ವೇಳೆ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆದಾಗ, ವಿದ್ಯಾರ್ಥಿಗಳು ಯಾಕೆ ಆಸ್ಪತ್ರೆಯಲ್ಲಿದ್ದಾರೆ, ಅವರು ಭಯೋತ್ಪಾದಕರೇ ಎಂದು ಪ್ರಶ್ನಿಸಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಆರೋಪದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಯಶ್ಪಾಲ್ ಸುವರ್ಣ ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪರ ಘೋಷಣೆ ಕೂಗಿದವರಿಗೆ ಶಿಕ್ಷೆಯಾಗದ ಪರಿಸ್ಥಿತಿಯಿದೆ ಎಂಬ ಆರೋಪದ ನಡುವೆಯೇ, ಭಾರತ ಮಾತೆಗೆ ಜಯವಾಗಲಿ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಯಾವ ನ್ಯಾಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗುವುದಕ್ಕೂ ನಿರ್ಬಂಧವಿದೆಯೇ? ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಬಗ್ಗೆ ಸರ್ಕಾರ ತಕ್ಷಣ ಸ್ಪಷ್ಟನೆ ನೀಡಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.