ಜಿಲ್ಲಾಡಳಿತದ ಭರವಸೆ ಹಿನ್ನಲೆ: ಕರವೇ ಉಪವಾಸ ಅಂತ್ಯ
Tuesday, October 06, 2026
ಉಡುಪಿಯ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ, ಬಡವರು ಹಾಗೂ ಅಗತ್ಯವಿರುವವರಿಗೆ ಚಿಕಿತ್ಸೆ ದೊರೆಯುವಂತೆ ಆಸ್ಪತ್ರೆ ಕಾರ್ಯಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಜಿಲ್ಲಾಡಳಿತದ ಭರವಸೆಯ ಹಿನ್ನೆಲೆಯಲ್ಲಿ ಸೋಮವಾರ ಅಂತ್ಯಗೊಂಡಿತು.
ಐದನೇ ದಿನವಾದ ಸೋಮವಾರ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ್ ಹುಬ್ಬಳ್ಳಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ನೂತನ ಜಿಲ್ಲಾಸ್ಪತ್ರೆಯಲ್ಲಿ ಯಂತ್ರೋಪಕರಣಗಳ ಅಳವಡಿಕೆ ಕಾರ್ಯವನ್ನು ಮಂಗಳವಾರದಿಂದಲೇ ಆರಂಭಿಸಲಾಗುವುದು. ನ.5ರೊಳಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡಿದ ಎಡಿಸಿ ಅಬೀದ್ ಗದ್ಯಾಳ, ಉಪವಾಸ ನಿರತರಾದ ಕಾರ್ಯಕರ್ತರಿಗೆ ತಂಪು ಪಾನೀಯ ನೀಡಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.
ಈ ಕುರಿತು ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್, ‘ಜಾಗಟೆ ಹಾಗೂ ಗಂಟೆ ಬಾರಿಸುವ ಮೂಲಕ ನಿದ್ದೆಯಲ್ಲಿರುವ ಸರ್ಕಾರವನ್ನು ಎಚ್ಚರಿಸಲು ಒಂದು ವಾರದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೆವು. ಐದನೇ ದಿನ ಜಿಲ್ಲಾಡಳಿತದ ಅಧಿಕಾರಿಗಳು ಆಗಮಿಸಿ ನ.5ರೊಳಗೆ ಆಸ್ಪತ್ರೆ ಆರಂಭಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ಆಸ್ಪತ್ರೆ ಕಾರ್ಯಾರಂಭಗೊಳ್ಳದಿದ್ದರೆ ನ.6ರಿಂದ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮತ್ತೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಪ್ರಸನ್ನಕುಮಾರ್ ಶೆಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಸಂಚಾಲಕ ಎಂ.ಎಸ್. ಸೈಯದ್ ನಿಜಾಮುದ್ದೀನ್, ಉಪಾಧ್ಯಕ್ಷ ಅಲ್ಫಾನ್ಸೋ ಮೆನೇಜಸ್ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

