ಅಭಿಜಿತ್ ದೀಪ್ಕೆ ಪೊಲೀಸ್ ವಶ: ಜಂತರ್ ಮಂತರ್ ಪ್ರತಿಭಟನೆಗೆ ಅಜಿಂಕ್ಯ ನೇತೃತ್ವ
ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಗೆ ಮುನ್ನ ಯೂಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಮುಂಜಾನೆ ಗುರುಗ್ರಾಮ್ ಪೊಲೀಸರ ನೆರವಿನೊಂದಿಗೆ ಧ್ರುವ್ ರಾಠಿ ಅವರನ್ನು ವಶಕ್ಕೆ ಪಡೆದ ದಿಲ್ಲಿ ಪೊಲೀಸರು, ಬಳಿಕ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಾನ್ ಬ್ರಿಟ್ಟಾಸ್ ಮತ್ತು ಕೆ.ಎನ್. ಬಾಲಗೋಪಾಲ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಮೂವರು ಪೊಲೀಸ್ ವಶದಲ್ಲಿರುವವರೆಗೆ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವವನ್ನು ಕಾಕ್ರೋಚ್ ಜನತಾ ಪಾರ್ಟಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, “ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ. ಯಾವುದಕ್ಕೂ ಹೆದರುವುದಿಲ್ಲ. ನನ್ನನ್ನು ಬಂಧಿಸಲಿ ಅಥವಾ ವಶಕ್ಕೆ ಪಡೆಯಲಿ, ಅದರಿಂದ ನನಗೇನೂ ವ್ಯತ್ಯಾಸವಾಗುವುದಿಲ್ಲ. ನಮ್ಮ ಮೇಲೆ ಯುಎಪಿಎ ಅಥವಾ ಎನ್‌ಎಸ್‌ಎ ಕಾಯ್ದೆಗಳನ್ನು ಹೇರಿದರೂ ಹೋರಾಟ ನಿಲ್ಲಿಸುವುದಿಲ್ಲ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳಿಗಾಗಿ ಹಾಗೂ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.