-->
SIR ವಿರುದ್ಧ ಉಡುಪಿಯಲ್ಲಿ ‘ಊರೂರು ಜಂತರ್ ಮಂತರ್’ ಪ್ರತಿಭಟನೆ

SIR ವಿರುದ್ಧ ಉಡುಪಿಯಲ್ಲಿ ‘ಊರೂರು ಜಂತರ್ ಮಂತರ್’ ಪ್ರತಿಭಟನೆ


ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ, ‘ಸಹಬಾಳ್ವೆ’ ಸಂಘಟನೆ ಹಾಗೂ ವಿವಿಧ ಸಮಾನಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಡುಪಿಯಲ್ಲಿ ‘ಊರೂರು ಜಂತರ್ ಮಂತರ್’ ಹೆಸರಿನಲ್ಲಿ ಪ್ರತಿಭಟನೆ ನಡೆಯಿತು.


ಉಡುಪಿಯ ಕ್ಲಾಕ್ ಟವರ್ ಬಳಿಯಿಂದ ಕಾಲ್ನಡಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಜೋಡುಕಟ್ಟೆ ಬಳಿ  ಪ್ರತಿಭಟನಾ ಸಭೆ ನಡೆಸಿದರು. ಈ ವೇಳೆ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರೆ ಭವ್ಯ ನರಸಿಂಹಮೂರ್ತಿ, 2014ರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಾ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದರು. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಹಾಗೂ ಯುವಕ-ಯುವತಿಯರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆಗಳನ್ನು ಈಡೇರಿಸಿಲ್ಲ. ಚುನಾವಣೆಯಲ್ಲಿ ಸೋಲುವ ಭೀತಿ ಎದುರಾದಾಗ ಚುನಾವಣಾ ಆಯೋಗವನ್ನು ತಮ್ಮ ಪರವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.

ಜ್ಞಾನೇಶ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗದ ಕಾರ್ಯವೈಖರಿಯನ್ನೂ ಅವರು ಪ್ರಶ್ನಿಸಿದರು. ದಲಿತರು ಹಾಗೂ ಹಿಂದುಳಿದ ವರ್ಗಗಳ ವಿರುದ್ಧ ಈ ಹಿಂದೆ ನಡೆದ ದಬ್ಬಾಳಿಕೆಗಳಿಗೆ ಈಗಿನ ಯುವಪೀಳಿಗೆ ಪ್ರಜಾಸತ್ತಾತ್ಮಕವಾಗಿ ಪ್ರತಿಕ್ರಿಯಿಸುತ್ತಿದೆ ಎಂದು ಹೇಳಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ 13 ಕೋಟಿ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಸಂಸತ್ತಿಗೆ ಹಾಜರಾಗದೆ ದೂರ ಉಳಿದಿದ್ದಾರೆ ಎಂದು ಟೀಕಿಸಿದ ಅವರು, ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆಯಿಂದ ಲಕ್ಷಾಂತರ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕವಿದೆ ಎಂದರು. ಕೂಡಲೇ SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಹಬಾಳ್ವೆ ಸಂಘಟನೆಯ ಫಣಿರಾಜ್  ,  ಸುಂದರ್ ಮಾಸ್ಟರ್ , ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಹರಿಪ್ರಸಾದ್ ರೈ, ಹರೀಶ್ ಕಿಣಿ,  ಇಸ್ಮಾಯಿಲ್ ಕೊಡಿಬೆಂಗ್ರೆ, ಪ್ರಶಾಂತ್ ಜತ್ತನ್, ನಾಗೇಶ್ ಕುಮಾರ್ ಉದ್ಯಾವರ್  ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article