ಕಟಪಾಡಿ–ಶಿರ್ವ ಹೆದ್ದಾರಿಯಲ್ಲಿ "ಶನಿವಾರ ಸಂತೆ" ಕಿರಿಕಿರಿ
Monday, October 05, 2026
ಕಟಪಾಡಿ–ಶಿರ್ವ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಪ್ರತಿ ಶನಿವಾರ ನಡೆಯುವ ವಾರದ ಸಂತೆ ದಿನದಿಂದ ದಿನಕ್ಕೆ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಕಿರಿಕಿರಿ ಉಂಟುಮಾಡುತ್ತಿದೆ. ಸಂತೆಗಾಗಿ ಸಮರ್ಪಕ ಸ್ಥಳ ಹಾಗೂ ಮೂಲಸೌಕರ್ಯಗಳ ಕೊರತೆಯಿಂದಾಗಿ ವ್ಯಾಪಾರಿಗಳು ರಸ್ತೆ ಬದಿಯನ್ನೇ ಅವಲಂಬಿಸುತ್ತಿದ್ದು, ಇದರಿಂದ ಪ್ರಮುಖ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುತ್ತಿದೆ.
ಶನಿವಾರ ಬೆಳಗ್ಗಿನಿಂದಲೇ ವಿವಿಧೆಡೆಯಿಂದ ವ್ಯಾಪಾರಿಗಳು ತರಕಾರಿ, ಹಣ್ಣು, ದಿನಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳನ್ನು ತಂದು ರಸ್ತೆ ಬದಿಯಲ್ಲಿ ಅಂಗಡಿಗಳನ್ನು ಹಾಕುತ್ತಾರೆ. ಪರಿಣಾಮವಾಗಿ ಹೆದ್ದಾರಿಯ ಎರಡೂ ಬದಿಗಳಲ್ಲೂ ವ್ಯಾಪಾರ ಚಟುವಟಿಕೆ ಹೆಚ್ಚಾಗಿ, ವಾಹನಗಳ ಸಂಚಾರಕ್ಕೆ ಸ್ಥಳಾವಕಾಶ ಕಡಿಮೆಯಾಗುತ್ತಿದೆ. ಗ್ರಾಹಕರು ರಸ್ತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸಿ ಖರೀದಿಗೆ ಮುಂದಾಗುವುದರಿಂದ ಮತ್ತಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದೆ.
ವಾರದ ಸಂತೆಗೆ ಬರುವ ಗ್ರಾಹಕರಿಗೆ ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆ ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿದೆ. ಹೀಗಾಗಿ ದ್ವಿಚಕ್ರ ವಾಹನಗಳು, ಕಾರುಗಳು ಸೇರಿದಂತೆ ವಾಹನಗಳನ್ನು ರಸ್ತೆ ಬದಿಯಲ್ಲಿ ಅಥವಾ ಕೆಲವೊಮ್ಮೆ ರಸ್ತೆಯಲ್ಲೇ ನಿಲ್ಲಿಸಿ ಖರೀದಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಸ್ಥಳಾವಕಾಶ ಕಡಿಮೆಯಾಗಿ, ಸಂಚಾರ ನಿಧಾನಗೊಳ್ಳುತ್ತಿದೆ.
ಈ ಕುರಿತು ಸ್ಥಳೀಯರಾದ ವೇಣುಗೋಪಾಲ್ ಮಾತನಾಡಿ, “ಸಂತೆ ನಡೆಯುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ರಾಜ್ಯ ಹೆದ್ದಾರಿ ಬದಿಯಲ್ಲೇ ವ್ಯಾಪಾರ ನಡೆಯುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ವ್ಯಾಪಾರಿಗಳಿಗೆ ಸೂಕ್ತ ಸ್ಥಳ, ಗ್ರಾಹಕರಿಗೆ ಪಾರ್ಕಿಂಗ್, ಶೌಚಾಲಯ, ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಕಟಪಾಡಿ ಪಂಚಾಯತ್ ಪಿಡಿಒ ತಿಲಕ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ವಾರದ ಸಂತೆಗೆ ಆಗಮಿಸುವವರಿಗೆ ವಾಹನ ನಿಲುಗಡೆಗೆ ಸೂಕ್ತ ಸ್ಥಳಾವಕಾಶದ ಕೊರತೆಯಿಂದಾಗಿ ರಸ್ತೆ ಮಧ್ಯೆಯೇ ವಾಹನಗಳನ್ನು ನಿಲ್ಲಿಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ಬಗ್ಗೆ ಪಿಡಬ್ಲ್ಯುಡಿ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶ ಒದಗಿಸಿದಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ರಾಜ್ಯ ಹೆದ್ದಾರಿ ಬದಿಯಲ್ಲಿನ ವ್ಯಾಪಾರ ಚಟುವಟಿಕೆಯನ್ನು ನಿಯಂತ್ರಿಸುವುದರ ಜತೆಗೆ ವಾರದ ಸಂತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಇನ್ನಷ್ಟು ಬಿಗಡಾಯಿಸುವುದರಲ್ಲಿ ಸಂದೇಹವಿಲ್ಲ.

.jpeg)
.jpeg)