ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ನ.14ರಂದು ಕಾರ್ಕಳದಲ್ಲೂ ಹಕ್ಕೊತ್ತಾಯ ಸಭೆ
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ತಾಲೂಕು ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ ಸಂಘದ ನೇತೃತ್ವದಲ್ಲಿ ನವೆಂಬರ್ 14ರಂದು ಕಾರ್ಕಳ ತಾಲೂಕು ಹಕ್ಕೊತ್ತಾಯ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ.
ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲಾ ಘಟಕದ ಕರೆಯ ಮೇರೆಗೆ ಕಾರ್ಕಳ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಜಿಲ್ಲಾ ಹೋರಾಟ ಸಮಿತಿಯು ಈಗಾಗಲೇ ಉಡುಪಿಯಲ್ಲಿ ಜಿಲ್ಲಾ ಮಟ್ಟದ ಹಕ್ಕೊತ್ತಾಯ ಸಭೆ ನಡೆಸಿದೆ. ಬಳಿಕ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ಕಳೆದ ಎರಡು-ಮೂರು ತಿಂಗಳಿನಿಂದ ನಿರಂತರವಾಗಿ ಹಕ್ಕೊತ್ತಾಯ ಸಭೆಗಳನ್ನು ಆಯೋಜಿಸುವ ಮೂಲಕ ಜನಜಾಗೃತಿ ಮೂಡಿಸಲಾಗಿದೆ ಎಂದರು.
ಸೆಪ್ಟೆಂಬರ್ 29ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಬೇಡಿಕೆಯ ಪರಿಶೀಲನೆಗಾಗಿ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿರುವುದು ಹೋರಾಟದ ಮೊದಲ ಯಶಸ್ಸಿನ ಹೆಜ್ಜೆಯಾಗಿದೆ. ಇದೇ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನ ವಕೀಲರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡಂತೆ ನವೆಂಬರ್ 14ರಂದು ಮಧ್ಯಾಹ್ನ 3.30ಕ್ಕೆ ಅನಂತಶಯನದ ಬಳಿಯ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ಕಾರ್ಕಳ ತಾಲೂಕು ಹಕ್ಕೊತ್ತಾಯ ಸಭೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್ ಮಾತನಾಡಿ, ತಾಲೂಕು ಹಕ್ಕೊತ್ತಾಯ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲು ವಕೀಲರ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಕರಾವಳಿಯ ನ್ಯಾಯಾಂಗ ವ್ಯವಸ್ಥೆಗೆ ಅನುಕೂಲವಾಗುವ ಈ ಮಹತ್ವದ ಹೋರಾಟದಲ್ಲಿ ತಾಲೂಕಿನ ಎಲ್ಲ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಸುನಿಲ್ ಕುಮಾರ್ ಶೆಟ್ಟಿ, ಶೇಖರ್ ಮಡಿವಾಳ, ಸದಾನಂದ ಸಾಲಿಯಾನ್, ರವೀಂದ್ರ ಮೊಯಿಲಿ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕಮಲಾಕ್ಷ ಕಾಮತ್, ರಾಜಕೀಯ ಮುಖಂಡ ಶುಭದ ರಾವ್, ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಮಾಜಿ ಕೌನ್ಸಿಲರ್ ಅವಿನಾಶ್ ಜಿ. ಶೆಟ್ಟಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭೆಗೆ ಸಲಹೆ-ಸೂಚನೆಗಳನ್ನು ನೀಡಿದ ಅವರು, ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಸ್ವಾಗತಿಸಿ, ಹರೀಶ್ ಅಧಿಕಾರಿ ವಂದಿಸಿದರು.
