ಮಾದಕ ವಸ್ತು ಪೂರೈಕೆ: ಮಹಿಳೆಯ ಬಂಧನ, 15.3 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ
ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 15.30 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಮಹಿಳೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ನಿವಾಸಿ ನಸೀಮಾ ಅಲಿಯಾಸ್ ನಸೀಮ್ (42) ಎಂದು ಗುರುತಿಸಲಾಗಿದೆ.
ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗೆ ನಸೀಮಾ ಮಾದಕ ವಸ್ತು ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ಮಾದಕ ವಸ್ತು ಪೂರೈಕೆಯ ಮೂಲ ಪತ್ತೆಹಚ್ಚಲು ಮುಂದಾಗಿದ್ದರು.
ಖಚಿತ ಮಾಹಿತಿ ಆಧರಿಸಿ ಪಂಪ್‌ವೆಲ್-ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿರುವ ಫ್ಲಾಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 15.30 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಿ ಮಾರಾಟ ಮಾಡುತ್ತಿದ್ದ ಅಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.