ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ; 22.35 ಲಕ್ಷ ಮೌಲ್ಯದ ಸೊತ್ತು ವಶ
ಗೋವಾ ರಾಜ್ಯದಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದು, ಸಾಗಾಟಕ್ಕೆ ಬಳಸಿದ್ದ ಎರಡು ವಾಹನಗಳು ಸಹಿತ ಒಟ್ಟು 22.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನ.11ರಂದು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಅದಕ್ಕೆ ಎಸ್ಕಾರ್ಟ್ ನೀಡುತ್ತಿದ್ದ ಮತ್ತೊಂದು ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಾಟ ಬೆಳಕಿಗೆ ಬಂದಿದೆ.
ಈ ಸಂಬಂಧ ಕಾರವಾರದ ಕಿನ್ನಾರ ಗ್ರಾಮದ ವಿನಯ್ (47), ನಂದಗಡದ ಗಜಾನನ ಮಹಾಬಲೇಶ್ವರ ನಾಯ್ಕ್ (45), ಅಮದಹಳ್ಳಿಯ ಸುಜಿತ್ ತಾಳೆಕೆರೆ (25) ಹಾಗೂ ಶಿರ್ವಾಡ ಗ್ರಾಮದ ಲಾರೆನ್ಸ್ ಥಾಮಸ್ ಮೆಂಡೋನ್ಸ್ (49) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 14.35 ಲಕ್ಷ ಮೌಲ್ಯದ 2,583 ಲೀಟರ್ ಮದ್ಯ, 5 ಲಕ್ಷ ಮೌಲ್ಯದ ಮಹೀಂದ್ರಾ ಪಿಕ್‌ಅಪ್ ಇನ್ಸುಲೇಟರ್ ವಾಹನ ಹಾಗೂ 3 ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸೊತ್ತುಗಳ ಮೌಲ್ಯ 22.35 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿ ವಿನಯ್ ವಿರುದ್ಧ ಈಗಾಗಲೇ ಕಾರವಾರ ಜಿಲ್ಲೆಯ ಚಿತ್ತಾಕುಲ ಪೊಲೀಸ್ ಠಾಣೆ, ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಅಬಕಾರಿ ಪೊಲೀಸ್ ಠಾಣೆಗಳಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಜಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಡುಬಿದ್ರೆ ಠಾಣೆಯ ಪಿಎಸ್‌ಐಗಳಾದ ಶಕ್ತಿವೇಲು ಈ.,ಅನಿಲ್ ಕುಮಾರ್ ಟಿ ನಾಯ್ಕ್ , ಅಪರಾಧ ಪತ್ತೆ ತಂಡದ ರಾಜೇಶ್, ಗಿರೀಶ್, ಹೆಡ್ ಕಾನ್ಸ್ಟೇಬಲ್ಗಳಾದ ಕೃಷ್ಣಪ್ರಸಾದ್, ಜೀವನ್ , ಸತೀಶ್ ಬೆಳ್ಳೆ , ಶಿವಾನಂದ ಪೂಜಾರಿ , ಪಡುಬಿದ್ರೆ ಠಾಣೆಯ ಅಶ್ವಿನ್ ಕುಮಾರ್, ಶರಣ್, ಯಾಸಿನ್ ಖಾಜಿ, ರೆಹಮಾನ್, ರುಕ್ಮಿಣಿ ಹಾಗೂ ಸಿಡಿಆರ್ ವಿಭಾಗದ ದಿನೇಶ್ ಮೊದಲಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
