ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಧ್ವನಿ ಅಡಗಿಸಲು ಬಿಜೆಪಿ ವ್ಯವಸ್ಥಿತ ಪ್ರಯತ್ನ: ಐವನ್ ಡಿಸೋಜಾ
Friday, November 27, 2026
ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕಾದ ಮೆಟಾ, ಫೇಸ್ ಬುಕ್ ಇನ್ನಿತರ ಸಾಮಾಜಿಕ ಜಾಲತಾಣಗಳು ಬಿಜೆಪಿ, ಆರ್ ಎಸ್ಎಸ್ ನ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅಸಮಾಧಾನ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯಲ್ಲಿ ನಡೆದ "ಮೆಟಾ ಬಿಜೆಪಿ ಕಾ ಬೇಟಾ" ಅಭಿಯಾನದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುವಾಗ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡುವ ಕೆಲಸ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ಧ್ವನಿಯನ್ನು ಅಡಗಿಸುವ ವ್ಯವಸ್ಥಿತ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕಾದ ಮೆಟಾ, ಫೇಸ್ ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ. ಆ ಮೂಲಕ ಸಮಾಜದಲ್ಲಿ ದಂಗೆ ಹೇಳುವ ಸನ್ನಿವೇಶಗಳು ನಿರ್ಮಾಣವಾಗಿವೆ. ಮೆಟಾ ದಂತಹ ಸಾಮಾಜಿಕ ಸಂಸ್ಥೆ ಬಿಜೆಪಿಯ ಬೇಟಾ ಆಗಿ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮೊದಲಾದವರು ಭಾಗವಹಿಸಿದ್ದರು.
