ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಎಸ್ಪಿಗೆ ಬಿಲ್ಲವ ಯುವ ವೇದಿಕೆ ಆಗ್ರಹ
ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಅವರ ಸಾವಿನ ಹಿಂದಿನ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರಬರಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ನೇತೃತ್ವದಲ್ಲಿ ಸಮಾನ ಮನಸ್ಕರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಉಡುಪಿಯ ಬನ್ನಂಜೆ ಬಿಲ್ಲವ ಸಂಘದಿಂದ ಎಸ್ಪಿ ಕಚೇರಿವರೆಗೆ ಕಾಲ್ನಡಿಗೆ ಮೂಲಕ ತೆರಳಿದ ನೂರಾರು ಮಂದಿ ಕಚೇರಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಅವರಿಗೆ ಮನವಿ ನೀಡಿದರು.
ಪ್ರದೀಪ್ ಪೂಜಾರಿ ಅವರ ಸಾವಿಗೆ ಸಂಬಂಧಿಸಿದ ಎಲ್ಲಾ ಘಟನೆಗಳು, ಸಂದರ್ಭಗಳು ಹಾಗೂ ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ನಿಷ್ಪಕ್ಷಪಾತ ಉನ್ನತ ಮಟ್ಟದ ತನಿಖೆ ನಡೆಸಬೇಕು. ತನಿಖೆಯಲ್ಲಿ ಯಾರದ್ದೇ ತಪ್ಪು ಅಥವಾ ಕಾನೂನು ಉಲ್ಲಂಘನೆ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಿ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.
ಇದಲ್ಲದೆ, ಸಂತ್ರಸ್ತರ ದೂರನ್ನು ಸ್ವೀಕರಿಸಿಲ್ಲ ಎಂಬ ಆರೋಪದ ಬಗ್ಗೆಯೂ ಪ್ರತ್ಯೇಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಅಥವಾ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಇದಕ್ಕೆ ಸಹಕರಿಸಿರುವ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಇಲಾಖಾ ತನಿಖೆ ನಡೆಸಬೇಕು. ಮೃತರ ಸಹೋದರ ನೀಡಿರುವ ದೂರಿನ ಆಧಾರದಲ್ಲಿ ಠಾಣಾಧಿಕಾರಿ ಹಾಗೂ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಕರಣದ ಎಲ್ಲ ಆಯಾಮಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ತನಿಖೆ ಪಾರದರ್ಶಕವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು, ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಮನವಿ ಮಾಡಲಾಗಿದೆ.
ಒಂದು ವೇಳೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದರೆ, ಸಮಾಜದ ಗೌರವ, ನ್ಯಾಯ ಹಾಗೂ ಕಾನೂನಿನ ಮೇಲಿನ ನಂಬಿಕೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಬಿಲ್ಲವ ಸಮುದಾಯದ ಎಲ್ಲ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸಿ ಉಡುಪಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ವೇಳೆ ಮಾಜಿ ಶಾಸಕ ರಘುಪತಿ ಭಟ್, ನಗರಸಭಾ ಮಾಜಿ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಗೀತಾಂಜಲಿ ಸುವರ್ಣ ಸೇರಿದಂತೆ ಬಿಲ್ಲವ ಸಂಘಟನೆ ಪ್ರಮುಖರು, ಪದಾದಿಕಾರಿಗಳು, ಸಮಾನ ಮನಸ್ಕ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.
