ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡೆಗಣಿಸುವ ಆರೋಗ್ಯ ಸಚಿವರ ಹೇಳಿಕೆ ಖಂಡನೀಯ: ಶಾಸಕ ಗುರ್ಮೆ
ಆಶಾ ಕಾರ್ಯಕರ್ತೆಯರು ಇದ್ದರೂ, ಇಲ್ಲದಿದ್ದರೂ ಕೆಲಸ ನಡೆಯುತ್ತದೆ ಎಂಬ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಹೇಳಿಕೆ ಖಂಡನೀಯ ಎಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಎನ್ನದೆ, ಮಳೆ ಹಾಗೂ ಚಳಿಯನ್ನು ಲೆಕ್ಕಿಸದೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಸರ್ಕಾರ ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ ವರ್ತಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ ಮನೆಗೆ ತೆರಳಿ ಜನರ ಆರೋಗ್ಯದ ಕಾಳಜಿ ವಹಿಸಿದ ಆಶಾ ಕಾರ್ಯಕರ್ತೆಯರ ಸೇವೆ ಅಪಾರವಾದುದು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯ ಸಂದರ್ಭದಲ್ಲಿಯೂ ಅವರು ಮಹತ್ವದ ಸೇವೆ ಸಲ್ಲಿಸಿದ್ದಾರೆ. ಇಂತಹ ಕಾರ್ಯಕರ್ತೆಯರ ಸೇವೆಯನ್ನು ಮರೆತು ಆರೋಗ್ಯ ಸಚಿವರು ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಅವರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಇದ್ದ ಕಾಳಜಿ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿರುವ ಶಾಸಕ ಗುರ್ಮೆ, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.