ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಪ್ರವಾಸೋದ್ಯಮ, ಮೀನುಗಾರಿಕೆ, ಕೃಷಿಗೆ ವಿಶೇಷ ಒತ್ತು– ಸಚಿವ ರಿಜ್ವಾನ್ ಅರ್ಷದ್
ಉಡುಪಿ ಜಿಲ್ಲೆಯನ್ನು ಅಭಿವೃದ್ಧಿಯ ಉತ್ತುಂಗಕ್ಕೇರಿಸುವ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ, ಕೃಷಿ, ತೋಟಗಾರಿಕೆ ಹಾಗೂ ಯುವಜನರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ವಿವಿಧ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ರಾಜ್ಯೋತ್ಸವ ಸಂದೇಶ ನೀಡಿದರು.
ಮೈಸೂರಿನ ಸಾಂಸ್ಕೃತಿಕ ಪರಿಸರದಲ್ಲಿ ಬೆಳೆದ ತಮಗೆ ಕರಾವಳಿಯ ಸಾಂಸ್ಕೃತಿಕ ರಾಜಧಾನಿ ಹಾಗೂ ಶ್ರೀಕೃಷ್ಣನ ನೆಲೆವೀಡಾದ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಕನ್ನಡಮ್ಮನ ಕೃಪೆ. ಕನ್ನಡ ಮತ್ತು ಕನ್ನಡಿಗರ ಋಣ ತೀರಿಸುವ ಅವಕಾಶ ಸಿಕ್ಕಿರುವುದಕ್ಕೆ ಕೃತಜ್ಞನಾಗಿದ್ದೇನೆ ಎಂದರು.
ಉಡುಪಿ ಭಾವೈಕ್ಯ, ಭ್ರಾತೃತ್ವ ಮತ್ತು ಸರ್ವಧರ್ಮ ಸಮಭಾವಕ್ಕೆ ಹೆಸರಾದ ನೆಲ. ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರನ್ನೂ ಪ್ರೀತಿಸಬೇಕು ಎಂಬ ಮೌಲ್ಯಗಳನ್ನು ತಂದೆ-ತಾಯಿಯಿಂದ ಕಲಿತಿದ್ದೇನೆ. ಧರ್ಮ ಎನ್ನುವುದು ನಾಲ್ಕು ಗೋಡೆಗಳ ನಡುವಿನ ವಿಚಾರವಾಗಿರಬೇಕು. ಮನೆ, ಮಂದಿರ, ಮಸೀದಿ ಹಾಗೂ ಚರ್ಚುಗಳಿಂದ ಹೊರಬಂದಾಗ ನಾವೆಲ್ಲರೂ ಭಾರತೀಯರು ಮತ್ತು ಕನ್ನಡಿಗರು ಎಂಬ ಭಾವನೆ ಹೊಂದಬೇಕು. ಮಾನವೀಯತೆಗಿಂತ ದೊಡ್ಡ ಧರ್ಮ ಮತ್ತೊಂದಿಲ್ಲ. ಕನ್ನಡದ ಆದಿಕವಿ ಪಂಪನ 'ಮನುಜ ಕುಲಂ ತಾನೊಂದೇ ವಲಂ' ಎಂಬ ಸಂದೇಶ ಎಲ್ಲರಿಗೂ ಆದರ್ಶವಾಗಬೇಕು ಎಂದು ಹೇಳಿದರು.
ಮಧ್ವಾಚಾರ್ಯರು, ಸಂತ ಕನಕದಾಸರು ಹಾಗೂ ಸಮಾನತೆಯ ಸಂದೇಶ ಸಾರಿದ ನಾರಾಯಣ ಗುರುಗಳು ನಡೆದಾಡಿದ ಈ ನೆಲಕ್ಕೆ ವಿಶಿಷ್ಟ ಹಿರಿಮೆಯಿದೆ. ಮಠ ಮತ್ತು ಮಸೀದಿಗಳನ್ನು ಸಮಾನ ಗೌರವದಿಂದ ಕಂಡು ದಾನಧರ್ಮದ ಪರಂಪರೆ ಬೆಳೆಸಿದ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಖಾಸಿಂ ಸಾಹೇಬ್ ಅವರ ಕೊಡುಗೆಯನ್ನೂ ಸ್ಮರಿಸಬೇಕು ಎಂದರು.
ಕೋಟ ಶಿವರಾಮ ಕಾರಂತರು, ಡಾ. ಯು.ಆರ್. ಅನಂತಮೂರ್ತಿ, ಪಾವೆಂ ಆಚಾರ್ಯ, ವ್ಯಾಸರಾಯ ಬಲ್ಲಾಳ ಹಾಗೂ ಮಣಿಪಾಲವನ್ನು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಗೆ ತಂದ ಡಾ. ಟಿ.ಎಂ.ಎ. ಪೈ ಅವರಂತಹ ಮಹನೀಯರು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಚಿತ್ರರಂಗದಲ್ಲಿ ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಕೂಡ ಜಿಲ್ಲೆಯ ಹೆಮ್ಮೆಯಾಗಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಧನೆಯ ಫಲವಾಗಿ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂದು ಘೋಷಿಸಿರುವುದು ಸಂತಸದ ವಿಚಾರ ಎಂದು ಹೇಳಿದರು.
ತ್ರಾಸಿ ಮತ್ತು ಮರವಂತೆ ಕಡಲತೀರಗಳಲ್ಲಿರುವ 7.07 ಎಕರೆ ಭೂಮಿಯನ್ನು ಬಳಸಿಕೊಂಡು ಸುಮಾರು 48 ಕೋಟಿ ರೂ. ವೆಚ್ಚದಲ್ಲಿ ರೆಸಾರ್ಟ್, ಮನರಂಜನಾ ಪಾರ್ಕ್ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಯೋಜನೆ ರೂಪಿಸಲಾಗಿದೆ. ಕಡಲು ಜಿಲ್ಲೆಯ ಪ್ರಮುಖ ಸಂಪತ್ತಾಗಿದ್ದು, ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಸರ್ಕಾರಿ ಮೀನುಗಾರಿಕಾ ಕಾಲೇಜಿನಲ್ಲಿ 'ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆರೈನ್ ಟೆಕ್ನಾಲಜಿ ಆ್ಯಂಡ್ ಬ್ಲೂ ಎಕಾನಮಿ' ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಯನ್ನು 60ರಿಂದ 200ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮೀನುಗಾರಿಕಾ ಸಂಪರ್ಕ ರಸ್ತೆಗಳ ನಿರ್ವಹಣೆ, ಯುವಜನರಿಗೆ ಅನುಕೂಲ ಕಲ್ಪಿಸುವ ಭಾರತ್ ಜೋಡೋ ಯುವ ಸಂಘಗಳು, ಗುಣಮಟ್ಟದ ಆರೋಗ್ಯ ಸೇವೆ, ಹವಾಮಾನ ಆಧಾರಿತ ಬೆಳೆ ವಿಮೆ ಹಾಗೂ ಕೃಷಿ ಮತ್ತು ತೋಟಗಾರಿಕೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಜಿಲ್ಲೆಯ ಆರ್ಥಿಕ ಬೆನ್ನೆಲುಬಾಗಿರುವ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು. ಪ್ರವಾಸಿಗರು ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವ ಉದ್ದೇಶದ 'ಕಲಾ ನಡಿಗೆ, ನಿಮ್ಮ ಬಳಿಗೆ' ಯೋಜನೆಯ ಸಮರ್ಪಕ ಅನುಷ್ಠಾನಕ್ಕೂ ಒತ್ತು ನೀಡಲಾಗುವುದು ಎಂದರು.
ಜಿಲ್ಲೆಯ ಐದು ಗ್ರಾಮ ಪಂಚಾಯಿತಿಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಪಾತ್ರವಾಗಿರುವುದು ಹೆಮ್ಮೆಯ ಸಂಗತಿ. ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ತುಳುನಾಡಿನ ಸಂಸ್ಕೃತಿಯೊಂದಿಗೆ ಗುರುತಿಸಿಕೊಂಡಿರುವ ಉಡುಪಿ ಕನ್ನಡದ ಮಹಾನ್ ಪರಂಪರೆಗೆ ದೊಡ್ಡ ಕೊಡುಗೆ ನೀಡಿದೆ. ಇಂತಹ ಭವ್ಯ ಪರಂಪರೆಯ ನೆಲದಲ್ಲಿ ಜನರ ನಡುವೆ ವಿಷಬೀಜ ಬಿತ್ತುವ ಪ್ರಯತ್ನಗಳು ನಡೆಯುತ್ತಿರುವುದು ನೋವಿನ ಸಂಗತಿ. ಈ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಜಾತಿ, ಮತ, ಪಂಥಗಳಿಗಿಂತ ನಾವೆಲ್ಲರೂ ಭಾರತೀಯರು ಮತ್ತು ಕನ್ನಡಿಗರು ಎಂಬ ಭಾವನೆ ಮುಖ್ಯವಾಗಬೇಕು ಎಂದು ಹೇಳಿದರು.
'ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ' ಎಂಬ ಆಶಯದೊಂದಿಗೆ ಎಲ್ಲರೂ ಕೈಜೋಡಿಸಿ ಮುನ್ನಡೆಯಬೇಕು. ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ಆಶಯದಂತೆ ನಿತ್ಯೋತ್ಸವವಾಗಬೇಕು ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತಿತರರು ಉಪಸ್ಥಿತರಿದ್ದರು.

