ಉಡುಪಿ ಜಿಲ್ಲೆಯಲ್ಲಿ ಭೂ ಮಂಜೂರಾತಿ, ಮನೆ ಸಕ್ರಮಕ್ಕೆ ಅಡೆತಡೆ ನಿವಾರಿಸಿ : ಸಚಿವ ರಿಜ್ವಾನ್ ಅರ್ಷದ್ ಸೂಚನೆ
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡ ಕುಟುಂಬಗಳ ಮನೆಗಳ ಸಕ್ರಮೀಕರಣ, ಬಗರ್ ಹುಕುಂ ಭೂಮಿ ಮಂಜೂರಾತಿ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಚಿವ ರಿಜ್ವಾನ್ ಅರ್ಷದ್ ಸುದೀರ್ಘ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿರುವ ಮನೆಗಳ ಸಕ್ರಮೀಕರಣ, ಬಗರ್ ಹುಕುಂ ಜಮೀನುಗಳ ವಿತರಣೆ ವಿಳಂಬ, ಗೋಡಂಬಿ ಪ್ಲಾಂಟೇಶನ್ಗಳ ಗುತ್ತಿಗೆ ಅವಧಿ ವಿಸ್ತರಣೆ ಹಾಗೂ ಡೀಮ್ಡ್ ಫಾರೆಸ್ಟ್ ಸರ್ವೆಯಲ್ಲಿನ ಅಡೆತಡೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಮನೆಗಳ ಸಕ್ರಮೀಕರಣಕ್ಕೆ ಸಲ್ಲಿಸಿರುವ ಅರ್ಜಿಗಳನ್ನು ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿ ತಿರಸ್ಕರಿಸುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರು ಬಹುತೇಕ ಬಡವರಾಗಿದ್ದು, ಒಮ್ಮೆ ಅರ್ಜಿ ತಿರಸ್ಕೃತಗೊಂಡರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು.
ಅದೇ ರೀತಿ ಶಾಸಕರ ನೇತೃತ್ವದ ಸಮಿತಿಗಳಿಂದ ವಿಲೇವಾರಿಯಾಗಿರುವ ಬಗರ್ ಹುಕುಂ ಅರ್ಜಿಗಳಿಗೆ ಸಂಬಂಧಿಸಿದ ಜಮೀನುಗಳ ಸರ್ವೆ ಕಾರ್ಯವೂ ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಫಾರಂ 94ಸಿ ಅಡಿಯಲ್ಲಿ ಮನೆಗಳ ಸಕ್ರಮೀಕರಣಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದು ಎಂದರು. ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆಯಂತೆ ಕಂದಾಯ ಇಲಾಖೆಯ ತಾಂತ್ರಿಕ ಸಮಿತಿಯನ್ನು ಶೀಘ್ರದಲ್ಲೇ ಉಡುಪಿ ಜಿಲ್ಲೆಗೆ ಕಳುಹಿಸಿ, ಭೂಮಿ ವಿತರಣೆ ಹಾಗೂ ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಅರ್ಹ ಹಾಗೂ ನೈಜ ಅರ್ಜಿಗಳನ್ನು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಜಿಲ್ಲೆಯಲ್ಲಿ ಗೋಡಂಬಿ ಪ್ಲಾಂಟೇಶನ್ಗಳಿಗೆ ನೀಡಲಾಗಿರುವ ಜಮೀನುಗಳ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದು, ಅವುಗಳನ್ನು ನವೀಕರಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೇಂದ್ರ ಕಟಾರಿಯಾ, ಗೋಡಂಬಿ ಪ್ಲಾಂಟೇಶನ್ಗಳಿಗೆ ಕಡಿಮೆ ದರದಲ್ಲಿ ಭೂಮಿ ಗುತ್ತಿಗೆ ನೀಡುವುದನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ನ್ಯಾಯಾಲಯವೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಇನ್ನು ಮುಂದೆ ಗೋಡಂಬಿ ಪ್ಲಾಂಟೇಶನ್ಗಾಗಿ ಭೂಮಿ ಗುತ್ತಿಗೆ ಪಡೆಯಲಿಚ್ಛಿಸುವವರು ವಾಣಿಜ್ಯ ದರ ಪಾವತಿಸಿ ಪಡೆಯಬಹುದು ಎಂದರು.
ಇದೇ ವೇಳೆ ವರಾಹಿ ಯೋಜನೆಗೆ ಹೆಚ್ಚುವರಿಯಾಗಿ 17 ಎಕರೆ ಭೂಮಿ ಒದಗಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ರಾಜ್ಯಾದ್ಯಂತ ಡೀಮ್ಡ್ ಫಾರೆಸ್ಟ್ ಸರ್ವೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು. ಇದರಿಂದ ಭೂ ಮಂಜೂರಾತಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


