-->
 ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲು ಆಗ್ರಹ: ಕಥೊಲಿಕ್ ಸಭಾದಿಂದ ರಾಜ್ಯ ಸರಕಾರಕ್ಕೆ ಮನವಿ

ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಲು ಆಗ್ರಹ: ಕಥೊಲಿಕ್ ಸಭಾದಿಂದ ರಾಜ್ಯ ಸರಕಾರಕ್ಕೆ ಮನವಿ


ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)ಯನ್ನು ರದ್ದುಗೊಳಿಸುವಂತೆ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ದುರ್ಬಲ ಸಮುದಾಯಗಳ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ಭಾಷಣ, ಕೋಮುವಾದಿ ಪ್ರಚೋದನೆ ಮತ್ತು ಹಿಂಸಾಚಾರವನ್ನು ತಡೆಗಟ್ಟಲು ಸಮಗ್ರ ರಕ್ಷಣಾ ನೀತಿ ರೂಪಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಕಾಯ್ದೆಯು ಧಾರ್ಮಿಕ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳು, ಧಾರ್ಮಿಕ ಗುರುತು ಹಾಗೂ ನಂಬಿಕೆಯ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕ್ರೈಸ್ತ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ನಂಬಿಕೆ, ಧಾರ್ಮಿಕ ಆಚರಣೆ ಮತ್ತು ಗುರುತನ್ನು ಸ್ವತಂತ್ರವಾಗಿ ಅಭಿವ್ಯಕ್ತಪಡಿಸುವ ಹಕ್ಕಿಗೆ ನಿರ್ಬಂಧ ಹೇರುವ ಅಪಾಯವಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಭಾರತೀಯ ಸಂವಿಧಾನದ ವಿಧಿ 25ರ ಅಡಿಯಲ್ಲಿ ಪ್ರತಿಯೊಬ್ಬರಿಗೂ ಧರ್ಮವನ್ನು ನಂಬುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕಿದೆ. ಆದರೆ, ಪ್ರಸ್ತುತ ಕಾಯ್ದೆಯ ವ್ಯಾಪಕ ನಿರ್ಬಂಧಗಳು ಧಾರ್ಮಿಕ ಸ್ವಾತಂತ್ರ್ಯದ ಆಶಯಕ್ಕೆ ವಿರುದ್ಧವಾಗಿದ್ದು, ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳ ವಿಚಾರದಲ್ಲಿ ಕ್ರಿಮಿನಲ್ ಮೊಕದ್ದಮೆಗಳ ಭಯದ ವಾತಾವರಣ ಸೃಷ್ಟಿಸುವ ಸಾಧ್ಯತೆಯಿದೆ. ಆದ್ದರಿಂದ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ ಮತ್ತು ಮಾನವ ಘನತೆಯ ಸಂವಿಧಾನಿಕ ಆಶಯಗಳನ್ನು ಎತ್ತಿಹಿಡಿಯಲು ಕಾಯ್ದೆಯನ್ನು ರದ್ದುಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ಮಾದರಿ ನಾಯಕತ್ವ ಪ್ರದರ್ಶಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದರೊಂದಿಗೆ ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ದುರ್ಬಲ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ಮತ್ತು ಹಿಂಸಾಚಾರ ತಡೆಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಲಪಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ದ್ವೇಷಪೂರಿತ ಭಾಷಣಗಳು ಸಮಾಜದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ಸೃಷ್ಟಿಸುವುದಲ್ಲದೆ, ಶಾಂತಿಯುತ ಸಹಬಾಳ್ವೆಗೂ ಧಕ್ಕೆ ಉಂಟುಮಾಡುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ದ್ವೇಷ ಭಾಷಣ ಮತ್ತು ದ್ವೇಷಪೂರಿತ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಮಯೋಚಿತ ತನಿಖೆ, ವಿಚಾರಣೆ ಹಾಗೂ ತಪ್ಪಿತಸ್ಥರ ಹೊಣೆಗಾರಿಕೆಯನ್ನು ಖಚಿತಪಡಿಸಬೇಕು. ಅಗತ್ಯವಿರುವ ಶಾಸಕಾಂಗ ತಿದ್ದುಪಡಿಗಳನ್ನು ಕೈಗೊಂಡು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಂವಿಧಾನಿಕ ಖಾತರಿಗೆ ಧಕ್ಕೆಯಾಗದಂತೆ ಸೂಕ್ತ ಕಾನೂನು ಚೌಕಟ್ಟನ್ನು ಬಲಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ಅಧ್ಯಕ್ಷ ಮೆಲ್ವಿನ್ ಆರಾನ್ಹಾ, ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಗ್ಯಾರಿಫಿಲ್ಡ್ ಉರ್ಬಾನ್ ಲೂವಿಸ್, ನಿಯೋಜಿತ ಅಧ್ಯಕ್ಷ ಲೂಯಿಸ್ ಡಿಸೋಜಾ, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಡಾ. ಜೆರಾಲ್ಡ್ ಪಿಂಟೊ ಹಾಗೂ ಸಹಬಾಳ್ವೆ ಸಂಸ್ಥೆಯ ಪ್ರೊ. ಫಣಿರಾಜ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article