ಬಾಳೆ ಮುಹೂರ್ತ, ‘ಕದಳೀ ವಿಶ್ವದರ್ಶನ’ ಬಾಳೆ ಮೇಳಕ್ಕೆ ಸಿದ್ಧತೆ: ಸೋದೆ ಮಠದಲ್ಲಿ ಅಧಿಕಾರಿಗಳ ಸಮನ್ವಯ ಸಭೆ
ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಅಂಗವಾಗಿ ಪೂರ್ವಭಾವಿ ಸಮನ್ವಯ ಸಭೆ ನಡೆಯಿತು.
ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದ್ವಿತೀಯ ಶ್ರೀಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ನವೆಂಬರ್ 29ರಂದು ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತ ನಡೆಯಲಿದೆ. ಇದರೊಂದಿಗೆ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಆಯೋಜಿಸಲಾಗಿದೆ.
ಕಾರ್ಯಕ್ರಮಗಳ ಸುಗಮ ಹಾಗೂ ಯಶಸ್ವಿ ನಿರ್ವಹಣೆಯ ಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠದಲ್ಲಿ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ ನಡೆಯಿತು.
ಸಭೆಯಲ್ಲಿ ಮೇಳಕ್ಕೆ ಆಗಮಿಸುವ ಸಾರ್ವಜನಿಕರು, ರೈತರು, ಉದ್ಯಮಿಗಳು ಹಾಗೂ ಸಂದರ್ಶಕರ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಕುರಿತು ಚರ್ಚಿಸಲಾಯಿತು. ಸ್ವಚ್ಛತೆ, ಸುಗಮ ಸಂಚಾರ, ವಾಹನಗಳ ನಿಲುಗಡೆ, ಆರೋಗ್ಯ ಸೇವೆ, ಅಗ್ನಿಶಾಮಕ ಸುರಕ್ಷತೆ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಉ. ಕಲ್ಗುಟಕರ್, ಉಡುಪಿ ನಗರ ಠಾಣೆಯ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಹಾಗೂ ಸಂಚಾರ ಠಾಣೆಯ ಉಪನಿರೀಕ್ಷಕ ಮಹೇಶ್ ಟಿ. ಉಪಸ್ಥಿತರಿದ್ದರು.
ಮಾಜಿ ಶಾಸಕ ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹಾಗೂ ಮಾಜಿ ನಗರಸಭಾ ಸದಸ್ಯ ಗಿರೀಶ್ ಅಂಚನ್ ಭಾಗವಹಿಸಿದ್ದರು.
ನವೆಂಬರ್ 29ರಂದು ಬೆಳಿಗ್ಗೆ 7.45ಕ್ಕೆ ಉಡುಪಿಯ ರಥಬೀದಿಯಲ್ಲಿರುವ ಸೋದೆ ಶ್ರೀ ವಾದಿರಾಜ ಮಠದಲ್ಲಿ ಬಾಳೆ ಮುಹೂರ್ತ ನೆರವೇರಲಿದೆ. ಅದೇ ದಿನ ಬೆಳಿಗ್ಗೆ 9.30ಕ್ಕೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಉದ್ಘಾಟನೆಗೊಳ್ಳಲಿದೆ.
ಮೂರು ದಿನಗಳ ಕಾಲ ನಡೆಯುವ ಮೇಳವು ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ. ಮೇಳಕ್ಕೆ ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.

