ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲು ಹಾಗೂ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಕೈಗೊಳ್ಳಲು ಪೊಲೀಸರು ಕ್ರಮ ಆರಂಭಿಸಿದ್ದಾರೆ.
ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.